ಉಡುಪಿ : ಕಳೆದೆರಡು ದಿನಗಳಿಂದಲೂ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 45 ಸೆಂ.ಮೀ. ಮಳೆ ಸುರಿದಿದ್ದು, ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಉಂಟಾದ ಪ್ರವಾಹ ಹಾಗೂ ನೆರೆ ಹಾವಳಿಯಿಂದಾಗಿ ಸುಮಾರು 700 ಕ್ಕೂ ಅಧಿಕ ಕುಟುಂಬಗಳ ಸುಮಾರು 2,400 ಮಂದಿ ಪ್ರವಾಹದಲ್ಲಿ ಸಿಲುಕಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ.

ಎನ್ ಡಿಆರ್ ಎಫ್, ಕೋಸ್ಟ್ ಗಾರ್ಡ್, ಜನಪ್ರತಿನಿಧಿಗಳು ಮತ್ತು ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹೀಗಾಗಿ ತೀರ ಪ್ರದೇಶದಲ್ಲಿ ವಾಸಿಸುತ್ತಿರುವವರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ತಹಶೀಲ್ದಾರ್ ನೇತೃತ್ವದಲ್ಲಿ ಸುರಕ್ಷಿತ ಸ್ಥಳ ಗುರುತಿಸಲಾಗಿದ್ದು, ನೆರೆ ಸಂತೃಸ್ತರಿಗೆ ಊಟ ತಿಂಡಿ ವಸತಿಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ರಾತ್ರಿಯ ವೇಳೆಯಲ್ಲಿ ಮಳೆ ಹೆಚ್ಚಾದಲ್ಲಿ ರಕ್ಷಣೆ ಕಾರ್ಯ ಮಾಡಲು ಕಷ್ಟವಾಗಲಿದೆ. ಹಾಗಾಗಿ ಈಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಅವರು ಮನವಿ ಮಾಡಿದ್ದಾರೆ.