ಉಡುಪಿ : ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚುತ್ತಿದೆ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ ಕೂಡ ಜನರು ಮಾತ್ರ ಸರಿಯಾಗಿ ನಿಯಮ ಪಾಲನೆ ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೊರೊನಾ ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡಲು ಮುಂದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟು ಮನೆಯಲ್ಲಿಯೇ ಐಸೋಲೇಷನ್ ಆಗಿರುವ ಸೋಂಕಿತರು ಮನೆಯಿಂದ ಹೊರಗಡೆ ತಿರುಗಾಡುತ್ತಿ ರುವ ಪ್ರಕರಣ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಖುದ್ದು ವಾರ್ನಿಂಗ್ ನೀಡಿದ್ದರು. ರಾಜ್ಯ ಸರಕಾರ 4 ಕ್ಕಿಂತ ಹೆಚ್ಚು ಸೋಂಕಿತರಿದ್ದರೆ ಮಾತ್ರವೇ ಅಂತಹ ಮನೆಗಳನ್ನು ಸೀಲ್ ಡೌನ್ ಮಾಡುವಂತೆ ಸೂಚಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಸೋಂಕಿತರು ಮನೆಯಿಂದ ಹೊರಬರುವ ಪ್ರಕರಣ ಹೆಚ್ಚುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ರೆ, ಇನ್ನೊಂದೆಡೆ ಸಾವಿನ ಪ್ರಕರಣಗಳು ಕೂಡ ಏರಿಕೆಯಾಗುತ್ತಿದೆ. ಉಡುಪಿ ಜಿಲ್ಲಾಡಳಿತ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲೀಗ ಕೊರೊನಾ ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡುತ್ತಿದೆ. ಖುದ್ದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸೋಂಕಿತರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಅಲ್ಲದೇ ಮನೆಗಳನ್ನು ಖುದ್ದು ಸೀಲ್ ಡೌನ್ ಮಾಡುವ ಕಾರ್ಯವನ್ನು ಮಾಡುವ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ.

ಮೊದಲ ಅಲೆಯ ಸಂದರ್ಭದಲ್ಲಿ ಉಡುಪಿ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮ ಫಲಕೊಟ್ಟಿತ್ತು. ಕೊರೊನಾ ಸೋಂಕನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಖುದ್ದು ಜಿಲ್ಲಾಧಿಕಾರಿಗಳೇ ಕಟ್ಟುನಿಟ್ಟಿನ ಕ್ರಮವನ್ನು ಮುಂದಾಗಿದ್ದಾರೆ.
