ನಾಳೆ ಉಡುಪಿ, ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ : ಕೊರೊನಾ ನಿಯಂತ್ರಣಕ್ಕೆ ಜಾರಿಯಾಗುತ್ತಾ ಕಠಿಣ ರೂಲ್ಸ್

ಉಡುಪಿ/ ಮಂಗಳೂರು : ಕರಾವಳಿ ಭಾಗದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡೋ ಸಾಧ್ಯತೆಯಿದೆ.

ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಆಗಸ್ಟ್ 12ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತದೊಂದಿಗೆ ಕೊವಿಡ್ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡರುವ ಜಿಲ್ಲೆಯಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಅಗಸ್ಟ್ 12ರ ಗುರುವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಬಳಿಕ ನಗರದ ಉರ್ವಾದಲ್ಲಿರುವ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ದಕ್ಷಿಣ ಕನ್ನಡ ಕೋವಿಡ್ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ‌.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ನೇತೃತ್ವದಲ್ಲಿ ಸಭೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆತಂಕದ ಬಗ್ಗೆ ಜಿಲ್ಲಾಧಿಕಾರಿ ಗಳ ಜೊತೆ ಮಾಹಿತಿ ಪಡೆಯಲಿದ್ದಾರೆ. ಮಧ್ಯಾಹ್ನದ ಬಳಿಕ ನೇರವಾಗಿ ಉಡುಪಿಗೆ ತೆರಳಿ ಉಡುಪಿ ಜಿಲ್ಲಾ ಪಂಚಾಯತ್‌ನಲ್ಲಿ ಉಡುಪಿ ಜಿಲ್ಲಾ ಕೋವಿಡ್ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಉಡುಪಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಉಡುಪಿಯಿಂದ ಮತ್ತೆ ಮಂಗಳೂರಿಗೆ ಬರಲಿರುವ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 13ರ ಶುಕ್ರವಾರವೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪರಿಶೀಲನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.30ರ ವೇಳೆಗೆ ಕೇರಳದ ಗಡಿಭಾಗದ ಚೆಕ್ ಪೋಸ್ಟ್ ಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮಂಗಳೂರು-ಕೇರಳ ಗಡಿಭಾಗದ ತಲಪಾಡಿ ಚೆಕ್ ಪೋಸ್ಟ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಗಡಿಭಾಗದಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಕೇರಳದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಗಡಿಭಾಗದಲ್ಲಿ ಭದ್ರತೆಯ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಪರಿಶೀಲನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಆರೋಗ್ಯ ಸಚಿವರಾದ ಡಾ. ಕೆ. ಸುಧಾಕರ್ ಕೂಡಾ ಎರಡೂ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಭೇಟಿ, ಸಭೆ ಮತ್ತು ವಾಸ್ತವ್ಯ ಜಿಲ್ಲೆಯ ಜನರಲ್ಲಿ ಕುತೂಹಲ ಮೂಡಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರಿಕೆಯಾಗುತ್ತಿದ್ದು ಸೋಂಕು ಹರಡುವುದನ್ನು ತಪ್ಪಿಸಲು ಜಿಲ್ಲಾಡಳಿತ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದ ಸೂಚನೆಯಂತೆ ವಾರಾಂತ್ಯದ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂವನ್ನು ಜಿಲ್ಲೆಯಾದ್ಯಾಂತ ಕಠಿಣವಾಗಿ ಹೇರಲಾಗಿದೆ.

ಇನ್ನುಳಿದಂತೆ ದೇವಾಲಯಗಳಲ್ಲಿ ವಿಶೇಷ ಸೇವೆಗಳನ್ನು ಜಿಲ್ಲಾಡಳಿತ ರದ್ದು ಮಾಡಿದೆ. ಭಕ್ತರಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಭಕ್ತರು ಸೇರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಮಂಜುನಾಥೇಶ್ವರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಗಳನ್ನು ಶನಿವಾರ ಮತ್ತು ಭಾನುವಾರ ಸಂಪೂರ್ಣ ಬಂದ್ ಮಾಡಲು ಜಿಲ್ಲಾಡಳಿತ ಸೂಚಿಸಿದೆ. ದೇವಾಲಯಕ್ಕೆ ಸಂಬಂಧಿಸಿದ ವಾಸ್ತವ್ಯ ಗೃಹದಲ್ಲಿ ಭಕ್ತರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದಿದ್ದಲ್ಲಿ ರೂಂ ಗಳನ್ನು ನೀಡದಂತೆ ಜಿಲ್ಲಾಡಳಿತ ಸೂಚಿಸಿದೆ. ಇಷ್ಟು ಕಠಿಣ ಕಾನೂನು ನಡುವೆ ಸಿಎಂ ಮತ್ತು ಆರೋಗ್ಯ ಸಚಿವರ ಭೇಟಿ ಮತ್ತಷ್ಟು ಹೊಸ ಆದೇಶಕ್ಕೆ ನಾಂದಿಯಾಗುತ್ತಾ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

Comments are closed.