Karnataka Weather Report : ದ.ಕ.ದಲ್ಲಿ ರೆಡ್‌ ಅಲರ್ಟ್‌, ಉಡುಪಿ ಯಲ್ಲಿ ಆರೆಂಜ್‌ ಅಲರ್ಟ್‌ : ಕರಾವಳಿಯ ಮೂರು ಜಿಲ್ಲೆಗಳಲ್ಲಿಂದು ಶಾಲೆಗಳಿಗೆ ರಜೆ ಘೋಷಣೆ

ಉಡುಪಿ/ ಮಂಗಳೂರು : Karnataka Weather Report : ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯ ಸದ್ಯಕ್ಕೆ ಬಿಡುವು ಪಡೆಯುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ಒಂದು ವಾರದಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿಗರು ತತ್ತರಿಸಿ ಹೋಗಿದ್ದಾರೆ. ಇಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಉಡುಪಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.

ಆರ್ಭಟಿಸುತ್ತಿರುವ ಮಳೆಯಿಂದಾಗಿ ಕರಾವಳಿ ಭಾಗದಲ್ಲಿ ಭಾರೀ ಅನಾಹುತವೇ ಸಂಭವಿಸಿದೆ. ಕೊಲ್ಲೂರು ಬಳಿಯಲ್ಲಿನ ಅರಶಿನಗುಂಡಿ ಫಾಲ್ಸ್‌ ನೋಡಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಯುವಕ ನೋರ್ವ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ನೂರಾರು ಮನೆಗಳು ಜಖಂ ಆಗಿದ್ದು, ಭಾರೀ ಗಾಳಿಯಿಂದಾಗಿ ಮರಗಳು ಉರುಳಿಬಿದ್ದಿದ್ದು, ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ನದಿಗಳು ತುಂಬಿ ಹರಿಯುತ್ತಿದ್ದು, ಹಲವು ಕಡೆಗಳಲ್ಲಿ ನೆರೆಯ ಹಾವಳಿ ಉಂಟಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿನ್ನೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜುಲೈ 28 ರ ವರೆಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ವಿಠಲ ಕುಂದರ್‌ ಎಂಬವರ ಮನೆ ನಾಶವಾಗುವ ಭೀತಿಯಲ್ಲಿದ್ದು, ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್‌ ರಾಜಶೇಖರ್‌ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಅಲ್ಲದೇ ಮನೆಯಲ್ಲಿ ಒಬ್ಬಂಟಿಯಾಗಿರುವ ವಿಠಲ ಕುಂದರ್‌ ಅವರನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಮನವಿ ಮಾಡಿದ್ರು, ಆದರೆ ವಿಠಲ ಕುಂದರ್‌ ಅವರು ನಿರಾಕರಿಸಿದ್ದಾರೆ. ನಂತರ ಇಬ್ಬರು ಮಕ್ಕಳನ್ನು ದೂರವಾಣಿ ಮೂಲಕ ಸಂಪರ್ಕಿಸಲಾಯಿತು. ಒಂದೊಮ್ಮೆ ವಿಠಲ ಕುಂದರ್‌ ಅವರನ್ನು ಬೇರೆಡೆಗೆ ಸ್ಥಳಾಂತರ ಮಾಡದಿದ್ರೆ, ಹಿರಿಯ ನಾಗರಿಕರ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ : Udupi power cut : ಉಡುಪಿ : ಜುಲೈ 25, 26 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ವಿದ್ಯುತ್‌ ಕಡಿತ, ಇಲ್ಲಿದೆ ಮಾಹಿತಿ

ಇದನ್ನೂ ಓದಿ : Drinking Water in Monsoon : ಮಳೆಗಾಲದಲ್ಲಿ ಕುಡಿಯುವ ನೀರಿನ ಬಗ್ಗೆ ಇರಲಿ ಗಮನ

Comments are closed.