ಭಾನುವಾರ, ಏಪ್ರಿಲ್ 27, 2025
HomeCoastal Newsಎಸ್‌ಎಸ್‌ಎಲ್‌ಸಿಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ, ಶಿಕ್ಷಕರು-ಅಧಿಕಾರಿಗಳು ಜವಾಬ್ದಾರಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ, ಶಿಕ್ಷಕರು-ಅಧಿಕಾರಿಗಳು ಜವಾಬ್ದಾರಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

- Advertisement -

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದ್ರೆ ಶಿಕ್ಷಕರ ಜೊತೆಗೆ ಅಧಿಕಾರಿಗಳು ಕೂಡ ಹೊಣೆಗಾರರು. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಸೇರಿದಂತೆ ಉತ್ತಮ ಶಿಕ್ಷಣ ಹೊಂದಲು ಪೂರಕ ವಾತಾವರಣವನ್ನು ಸೃಷ್ಠಿಸಿ, ಗುಣಮಟ್ಟದ ಶಿಕ್ಷಣವನ್ನು ನೀಡಿ, ವಿದ್ಯಾರ್ಥಿಗಳನ್ನು ಭಾರತದ ಸತ್‌ ಪ್ರಜೆಗಳನ್ನಾಗಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಅವರು ಉಡುಪಿ ಜಿಲ್ಲೆಯ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೈಕ್ಷಣಿಕ ವರ್ಷ ಪ್ರಾರಂಭದಿಂದಲೇ ವಿದ್ಯಾರ್ಥಿಗಳು ವಿಧ್ಯಾಬ್ಯಾಸದ ಚಟುವಟಿಕೆಗಳನ್ನು ಕೈಗೊಳ್ಳುವ ರೀತಿಯಲ್ಲಿ, ಶಿಕ್ಷಕರು ಅವರನ್ನು ಉತ್ತೇಜಿಸಬೇಕು ವರ್ಷದ ಕೊನೆಯಲ್ಲಿ ಪರೀಕ್ಷಾ ದೃಷ್ಠಿಯಿಂದ ವಿದ್ಯಾರ್ಥಿಗಳು ವಿಧ್ಯಾಭ್ಯಾಸ ಮಾಡುವುದು ಸರಿಯಲ್ಲ. ಒಂದೊಮ್ಮೆ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಶೇ.50 ರಷ್ಟು ಅವರ ಅನುತ್ತಿರ್ಣಕ್ಕೆ ಶಿಕ್ಷಕರು ಸೇರಿದಂತೆ ಇಲಾಖೆ ಕಾರಣವಾಗುತ್ತದೆ. ಇದಕ್ಕೆ ಆಸ್ಪದ ನೀಡದೇ ಉತ್ತಮ ಶಿಕ್ಷಣವನ್ನು ನೀಡಲು ಶಿಕ್ಷಕರು ಮುಂದಾಗಬೇಕೆಂದು ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರಗಳನ್ನು ವಿಳಂಬವಿಲ್ಲದೆ ವಿತರಣೆ ಮಾಡಬೇಕು. ಶೂ ಸೇರಿದಂತೆ ಮತ್ತಿತರ ಪರಿಕರಗಳನ್ನು ನೀಡುವಾಗ ಉತ್ತಮ ಗುಣಮಟ್ಟಗಳನ್ನು ನೀಡಬೇಕು ಎಂದರು. ಜಿಲ್ಲೆಯು ಉತ್ತಮ ಶೈಕ್ಷಣಿಕ ಕೇಂದ್ರವಾಗಿದೆ. ಆದರೆ ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದ ಸ್ಥಾನದಲ್ಲಿ ಕೆಳಮಟ್ಟದಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸ್ಥಾನವನ್ನು ಹೊಂದುವ ಹಾಗೆ ಈಗಿನಿಂದಲೇ ಕಾರ್ಯ ಪ್ರವೃತ್ತರಾಗಿ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕೆಂಬ ಮಹತ್ವಕಾಂಕ್ಷೆಯನ್ನು ಇಟ್ಟುಕೊಂಡು ಶಾಲೆಗಳಿಗೆ ಕಳುಹಿಸಲು ಉತ್ಸಾಹಕರಾಗಿರುತ್ತಾರೆ. ಇದಕ್ಕೆ ಪೂರಕವಾಗಿ ಶಿಕ್ಷಣ ಇಲಾಖೆ ಕಾರ್ಯಗಳನ್ನು ಮಾಡುವುದುರೊಂದಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಅವರ ಕನಸನ್ನು ನನಸಾಗಿಸಬೇಕು ಎಂದರು. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮರು ಸೇರ್ಪಡೆಗೆ ಶಿಕ್ಷಕರು ಮುಂದಾಗಬೇಕು. ಶಿಕ್ಷಣ ಇಲಾಖೆ ಉತ್ತಮ ಶಿಕ್ಷಣ ನೀಡಲು ಅನೇಕ ಯೋಜನೆಗಳನ್ನು ಇಟ್ಟುಕೊಂಡು ಮುಂದಿನ ದಿನಗಳಲ್ಲಿ ಜಾರಿಗೆ ತಂದು ಉತ್ತಮ ಸೌಲಭ್ಯಗಳನ್ನು ಒದಗಿಸಲು ಮುಂದಾಗಲಿದೆ. ಶಿಕ್ಷಕರು ಇದಕ್ಕೆ ಪೂರಕವಾಗಿ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಗ್ರಾಮೀಣ ಭಾಗಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಒಂದುಗೂಡಿಸಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಶಾಸಕರರೊಂದಿಗೆ ಚರ್ಚಿಸಿ ಶಾಲೆಗಳನ್ನು ಒಗ್ಗೂಡಿಸಬೇಕು., ಇಲ್ಲಿನ ವಿದ್ಯಾರ್ಥಿಗಳ ಸಾರಿಗೆ ವ್ಯವಸ್ಥೆಯನ್ನು ಎಸ್.ಡಿ.ಎಂ.ಸಿ ಮಟ್ಟದಲ್ಲಿ ತೀರ್ಮಾನಿಸಿ ಕಲ್ಪಿಸಬೇಕು ಎಂದರು. ಶಾಲೆಗಳ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಕಾಂಪೌಂಡ್ ಸೇರಿದಂತೆ ಮತ್ತಿತರ ಮೂಲ ಸೌಕರ್ಯಗಳ ಅಭಿವೃದ್ದಿ ಕಾರ್ಯಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಬೇಕು. ಇವುಗಳನ್ನು ಕೈಗೊಳ್ಳಲು ಅನುದಾನದ ಕೊರತೆಯಿದ್ದಲ್ಲಿ ಸರ್ಕಾರದ ಗಮನಕ್ಕೆ ತಂದಲ್ಲಿ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಿದರು.

ಶಿಕ್ಷಕರು ಹೆಚ್ಚಿನ ಜವಾಬ್ದಾರಿಯಿಂದ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು. ಕೆಲವು ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಶಿಕ್ಷಕರ ಕೊರತೆಗಳಿದ್ದರೂ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದರೊಂದಿಗೆ ಬದಲಾವಣೆ ತರಲು ಅಧಿಕಾರಿಗಳು ಹಾಗೂ ಶಿಕ್ಷಕರು ಮುಂದಾಗಬೇಕು ಎಂದರು. ಡಯಟ್ ಸಂಸ್ಥೆಗಳು ಕ್ರಿಯಾಶೀಲವಾಗುವುದರ ಜೊತೆಗೆ, ಶೈಕ್ಷಣಿಕ ಚಟುವಟಕೆಗಳನ್ನು ಹೆಚ್ಚಿಸಿ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಕಾರ್ಯಗಳನ್ನು ಮಾಡಬೇಕು ಎಂದರು.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೆಪಿಎಸ್ ಶಾಲೆಗಳ ಸಂಖ್ಯೆಯನ್ನು ತಾಲೂಕುಗಳಲ್ಲಿ ಹೆಚ್ಚಿಸುವ ಉದ್ದೇಶವಿದ್ದು, ಯಾವ ಸ್ಥಳದಲ್ಲಿ ಶಾಲೆಗಳು ಅಗತ್ಯವಿದೆ ಎಂಬ ಬಗ್ಗೆ ಈಗಲೇ ಪಟ್ಟಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸುವಂತೆ ಸೂಚಿಸಿದ ಸಚಿವರು, ಈಗಾಗಲೇ ಇರುವ ಕೆಪಿಎಸ್ ಶಾಲೆಗಳ ಮೂಲಭೂತ ಸೌಕರ್ಯಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ತಿಳಿಸಿದರು. ಇದನ್ನೂ ಓದಿ :  NEET PG Counselling 2023 : ನಾಳೆ ನೀಟ್ ಪಿಜಿ ಕೌನ್ಸೆಲಿಂಗ್ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್, ಮಂಗಳೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿಪ್ರಿಯಾನೋ ಮೊಂಥೆರೋ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Less than 50 percent result in SSLC, teachers-officials responsible: Education Minister Madhu Bangarappa

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular