ಕುಂದಾಪುರ : ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ತೆಕ್ಕಟ್ಟೆಯ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ವರ್ಷ) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದು, ನಿತ್ಯವೂ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದ ಎನ್ನಲಾಗುತ್ತಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚಂದ್ರ ಪೂಜಾರಿ ದೇವಸ್ಥಾನದ ಧಾರ್ಮಿಕ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದ್ದ.

ಕಳೆದ ಕೆಲ ಸಮಯದಿಂದಲೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರ ಪೂಜಾರಿ ದೇವಸ್ಥಾನದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾವಿಯ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಕೋಟ ಠಾಣೆಯ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.