Rain Alert : ಉಡುಪಿ, ದ.ಕದಲ್ಲಿ ಮಳೆಯಾರ್ಭಟ: ರೆಡ್‌ ಅಲರ್ಟ್‌ ಘೋಷಣೆ, ಕೊಡಗಿನಲ್ಲಿ ಶಾಲೆಗಳಿಗೆ ರಜೆ

ಉಡುಪಿ : Rain Alert : ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದೆ. ಉಡುಪಿ ಜಿಲ್ಲೆಯ ಬಹುತೇಕ ಕಡೆಗಳು ಮಳೆಯಿಂದಾಗಿ ಜಲಾವೃತವಾಗಿದೆ. ಶುಕ್ರವಾರವೂ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ನಗರದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ನಗರ ಬೈಲಕರೆ, ಕಲ್ಸಂಕ, ಉಪ್ಪೂರು, ಕಡಿಯಾಳಿ,ನಿಟ್ಟೂರು, ಮೂಡನಿಡಂಬೂರು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಉಡುಪಿ ನಗರ ಕೃಷ್ಣಮಠದ ಪಾರ್ಕಿಂಗ್‌ ಪ್ರದೇಶ ಸಂಪೂರ್ಣವಾಗಿ ಜಲಾವೃತವಾಗಿದೆ. ಇನ್ನು ಬನ್ನಂಜೆ, ನಿಟ್ಟೂರು, ಅಂಬಲಪಾಡಿ, ಕೆಮ್ತೂರು, ಉದ್ಯಾವರದಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿದೆ. ಇನ್ನು ಬ್ರಹ್ಮಾವರ ತಾಲೂಕಿನ ಕೋಟ, ಬಾರಕೂರು, ಮಾಬುಕಳ, ಗುಂಡ್ಮಿ, ಕೋಟದ ಹಂದಟ್ಟು, ಚಿತ್ರಪಾಡಿ, ಬೆಟ್ಲಕ್ಕಿ ಮುಂತಾದ ಕಡೆಗಳಲ್ಲಿ ನೆರೆ ಹಾವಳಿ ಸೃಷ್ಟಿಯಾಗಿದೆ. ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಇಂದು ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಗುರುವಾರ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ಶುಕ್ರವಾರವೂ ಕೂಡ ಪುನರ್ವಸು ಮಳೆ ಆರ್ಭಟಿಸುವ ಮುನ್ಸೂಚನೆಯನ್ನು ನೀಡಿದ್ದು, ಜಿಲ್ಲೆಯಲ್ಲಿ ಮತ್ತೆ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನು ಜಿಲ್ಲೆಗೆ ನಾಳೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ ನೀಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯೂ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯ ಬಹುತೇ ಕಡೆಗಳಲ್ಲಿ ಮಳೆ ಸುರಿದಿದೆ. ಮೂಡಬಿದಿರೆಯ ನೆಲ್ಲಿಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಂಟ್ರಾಡಿಯಲ್ಲಿ ನಿರಂಜನ್‌ ಎಂಬವರು ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರವಾಗಿರುವ ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣಕ್ಕೆ ನೀರು ನುಗ್ಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿಯಲ್ಲಿಯೂ ಭಾರೀ ಮಳೆ ಸುರಿದಿದೆ. ಕಳೆದ ನಾಲ್ಕು ದಿನಗಳಿಂದಲೂ ನಿರಂತರವಾಗಿ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಶಾಲೆ, ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿತ್ತು.

ಕೊಡಗು ಜಿಲ್ಲೆಯಲ್ಲಿಯೂ ಮಳೆ ಕಳೆದ ಮೂರ್ನಾಲ್ಕು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ. ಶುಕ್ರವಾರವೂ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜುಲೈ 7 ರಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರು ರಜೆ ಘೋಷಣೆ ಮಾಡಿದ್ದಾರೆ.

Comments are closed.