ಮಂಗಳೂರು : ಮಹಾಮಾರಿ ಕೊರೊನಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಬಲಿ ಪಡೆದಿದೆ. ಕೊರೊನಾದಿಂದ ಮೃತಪಟ್ಟಿದ್ದ ಬಂಟ್ವಾಳದ ಮಹಿಳೆಯ ಅತ್ತೆಯೂ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ.

ಬಂಟ್ವಾಳದ ಕಸಬಾ ಪೇಟೆಯ ನಿವಾಸಿಯಾಗಿರೋ 45 ವರ್ಷದ ಮಹಿಳೆ ಕಳೆದ ಮೂರು ದಿನಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಇದೀಗ ಮಹಿಳೆಯ 78 ವರ್ಷದ ಅತ್ತೆಯೂ ಸಾವನ್ನಪ್ಪಿದ್ದಾರೆ.

ವೃದ್ದ ಮಹಿಳೆ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ಹಲವು ದಿನಗಳಿಂದಲೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಕೊರೊನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸದ್ಯ ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.