ಮಂಗಳೂರಲ್ಲಿ ಖಾಸಗಿ ನರ್ಸಿಂಗ್ ಕಾಲೇಜುಗಳ ಎಡವಟ್ಟು : ಕೇರಳದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಮಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಕಾಲೇಜುಗಳು ಪುನರಾರಂಭಗೊಂಡಿದೆ. ಆದರೆ ಮಂಗಳೂರಿನ ನರ್ಸಿಂಗ್ ಕಾಲೇಜುಗಳ ನಿರ್ಲಕ್ಷ್ಯದಿಂದಾಗಿ ಕೇರಳ ರಾಜ್ಯದ ಸುಮಾರು 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದಿ, ಆರೋಗ್ಯ ಇಲಾಖೆ ಕಾಲೇಜುಗಳಿಗೆ ನೋಟಿಸ್ ಜಾರಿ ಮಾಡಿದೆ.

ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸುವಂತೆ ಆರೋಗ್ಯ ಇಲಾಖೆ ಸೂಚನೆಯನ್ನು ನೀಡಿದೆ. ಆದರೆ ಮಂಗಳೂರಿನ 2 ಖಾಸಗಿ ನರ್ಸಿಂಗ್ ಕಾಲೇಜುಗಳು ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಿಲ್ಲ. ಕೇರಳದ ಸುಮಾರು 600 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡಿದ್ದು, ಈ ಪೈಕಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿ ಕಾರಿ ಡಾ. ರಾಮಚಂದ್ರ ಬಾಯರಿ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಂದ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದರೂ ಕೂಡ ನಿರ್ಲಕ್ಷ್ಯವಹಿಸಿರುವ ಅರೆ ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Comments are closed.