ಉಡುಪಿಯಲ್ಲಿ ಪೊಲೀಸ್, ಆರೋಗ್ಯ ಸಿಬ್ಬಂದಿಗೆ ಸೋಂಕು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಮಂದಿಗೆ ಕೊರೊನಾ ಪಾಸಿಟಿವ್

0

ಉಡುಪಿ/ಮಂಗಳೂರು : ಕೊರೊನಾ ಮಹಾಮಾರಿ ಉಡುಪಿಯಲ್ಲಿ ಮತ್ತೆ ಆತಂಕವನ್ನು ಸೃಷ್ಟಿಸುತ್ತಿದೆ. ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಶಿರೂರು ಆಸ್ಪತ್ರೆಯ ಆರೋಗ್ಯ ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಮಂದಿಗೆ ಸೋಂಕು ದೃಢಪಟ್ಟಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಮಂದಿಗೆ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಉಡುಪಿ ಜಿಲ್ಲೆಯಲ್ಲಿ ಅಷ್ಟೇ ವೇಗವಾಗಿ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಪತ್ತೆಯಾಗಿರುವ ಬಹುತೇಕರು ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ. ಇದೀಗ ಇಂದೂ ಕೂಡ ಇಂದಿನ ಸೋಂಕಿತರಲ್ಲಿ ಎಂಟು ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇಬ್ಬರ ಸೋಂಕು ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 1077 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ಈಗಾಗಲೇ 961 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಳಿದಂತೆ 114 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕು ನಿಧಾನಕ್ಕೆ ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿಂದು 12 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 437ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 244 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, 185 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 6 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.

Leave A Reply

Your email address will not be published.