ಸಚಿನ್ ತೆಂಡೂಲ್ಕರ್ ವಿಶ್ವದಾಖಲೆ ಮುರಿದ ಕಿಂಗ್ ಕೊಹ್ಲಿ: ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28,000 ರನ್
Virat Kohli New World Record: ವಡೋದರಾ: ಭಾರತೀಯ ಕ್ರಿಕೆಟ್‌ನ ರನ್ ಮಷೀನ್ ವಿರಾಟ್ ಕೊಹ್ಲಿ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಸ್ಮರಣೀಯ ದಾಖಲೆ ಬರೆದಿದ್ದಾರೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಅವರು ಅತಿ ವೇಗವಾಗಿ 28,000 ರನ್ ಪೂರೈಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಹೆಸರಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದರು. ಈ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 28,000 ರನ್ ಪೂರೈಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಲ್ಲಿತ್ತು. ಸಚಿನ್ 644 ಇನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದರೆ, ಕೊಹ್ಲಿ ಕೇವಲ 624 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡುವ ಮೂಲಕ ನೂತನ ವಿಶ್ವ ದಾಖಲೆ ಬರೆದಿದ್ದಾರೆ.
ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನ:
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 42 ರನ್ ಗಳಿಸುತ್ತಿದ್ದಂತೆಯೇ ಕೊಹ್ಲಿ ಅವರು ಶ್ರೀಲಂಕಾದ ದಂತಕಥೆ ಕುಮಾರ್ ಸಂಗಕ್ಕಾರ (28,016 ರನ್) ಅವರ ದಾಖಲೆಯನ್ನು ಹಿಂದಿಕ್ಕಿದರು. ಇದರೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈಗ ಕೊಹ್ಲಿ ಅವರಿಗಿಂತ ಮುಂದೆ ಸಚಿನ್ ತೆಂಡೂಲ್ಕರ್ (34,357 ರನ್) ಮಾತ್ರ ಇದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು:
ಸಚಿನ್ ತೆಂಡೂಲ್ಕರ್ (ಭಾರತ): 34,357 ರನ್
ವಿರಾಟ್ ಕೊಹ್ಲಿ (ಭಾರತ): 28,017+ ರನ್
ಕುಮಾರ್ ಸಂಗಕ್ಕಾರ (ಶ್ರೀಲಂಕಾ): 28,016 ರನ್
ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ): 27,483 ರನ್
ಪಂದ್ಯದ ಮುಖ್ಯಾಂಶಗಳು:
ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು ಡೇರಿಲ್ ಮಿಚೆಲ್ ಅವರ ಭರ್ಜರಿ 84 ರನ್ ನೆರವಿನಿಂದ 301 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಶುಭಮನ್ ಗಿಲ್ ಭದ್ರ ಬುನಾದಿ ಹಾಕಿದರು. ಇದೇ ವೇಳೆ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಈ 11 ಕಡಲತೀರಗಳು ‘ಬ್ಲೂ ಫ್ಲಾಗ್’ ಮಾನ್ಯತೆಗೆ ಗುರುತು
ವಿರಾಟ್ ಕೊಹ್ಲಿ ಅವರು ಈಗಾಗಲೇ ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದರೂ, 50 ಓವರ್‌ಗಳ ಏಕದಿನ ಮಾದರಿಯಲ್ಲಿ ತಮ್ಮ ಅಪ್ರತಿಮ ಫಾರ್ಮ್ ಮುಂದುವರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸತತ ಶತಕ ಸಿಡಿಸಿ 2026ರ ವರ್ಷವನ್ನು ಭರ್ಜರಿಯಾಗಿ ಆರಂಭಿಸಿರುವ ಕೊಹ್ಲಿ, ಈಗ ಏಕದಿನ ಕ್ರಿಕೆಟ್‌ನಲ್ಲಿ 15,000 ರನ್ ಪೂರೈಸುವ ಹೊಸ್ತಿಲಲ್ಲಿದ್ದಾರೆ.



