ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 75 ವರ್ಷದ ವೃದ್ದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ವೃದ್ದ ಮಹಿಳೆಯನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟಿರುವ ವೃದ್ದ ಮಹಿಳೆ ಬಂಟ್ವಾಳದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಮಹಿಳೆಯ ಅತ್ತೆ ಎಂದು ತಿಳಿದುಬಂದಿದೆ.

ವೃದ್ದ ಮಹಿಳೆ ಪಾಶ್ವವಾಯುವಿನಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೊರೊನಾ ಸೋಂಕು ಕಾಣಿಸಿ ಕೊಳ್ಳುತ್ತಿದ್ದಂತೆಯೇ ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎಪ್ರಿಲ್ 22 ರಂದು ಮಹಿಳೆಯ ಗಂಟಲಿನ ದ್ರವವನ್ನು ತಪಾಸಣೆಗೆ ಕಳುಹಿಸಿದ್ದು, ಇಂದು ವರದಿ ಜಿಲ್ಲಾಡಳಿತದ ಕೈ ಸೇರಿದೆ.

ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಹದ್ದಿನಕಣ್ಣು ಇರಿಸಲಾಗಿದೆ.