ಮಂಗಳೂರು/ಉಡುಪಿ : ಕರಾವಳಿಯ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆಯಿರುವುದರಿಂದಾಗಿ ಭಾರೀ ಪ್ರಮಾಣದಲ್ಲಿ ಮಳೆ ಬೀಸಲಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಅಧಿಕವಾಗಿದ್ರೆ, ಮಲೆನಾಡಿನ ಭಾಗಗಳಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗುವ ಆತಂಕ ಎದುರಾಗಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆಯ ಮಾಜಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮಳೆ ಹೆಚ್ಚುವುದರಿಂದ ಶೀತಗಾಳಿ ಬೀಸಲಿದೆ. ಶೀತಗಾಳಿ ಬೀಸುವುದರಿಂದ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನದಲ್ಲಿ ಕೊರೊನಾ ವೈರಸ್ ಬಹುಬೇಗನೆ ಹರಡಲಿದೆ. ಹೀಗಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ತಜ್ಞರು ತಿಳಿಸಿದ್ದಾರೆ.