ಉಡುಪಿ : ಕೊರೊನಾ ಸೋಂಕು ವ್ಯಾಪಿಸುತ್ತಿರೋ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತೀವ್ರ ಉಸಿರಾಟ, ಜ್ವರ, ಕೆಮ್ಮ ಹಾಗೂ ಸೀತದ ಸಮಸ್ಯೆಗೆ ಭೇಟಿ ಕೊಡುವವರ ಮಾಹಿತಿಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕಡ್ಡಾಯವಾಗಿ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಲ್ಲ. ಆದರೆ ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಕಾಣಿಸಿಕೊಳ್ಳದಿರುವ ಸಲುವಾಗಿ ಕಟ್ಟುನಿಟ್ಟನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದೃಢಪಡುವ ಮುನ್ನವೇ ಸಾವನ್ನಪ್ಪುತ್ತಿದ್ದಾರೆ.

ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಖಾಸಗಿ ಹಾಗೂ ಸರಕಾರಿ ವೈದ್ಯರೊಂದಿಗೆ ಚರ್ಚೆ ನಡೆಸಿ ತಜ್ಞ ವೈದ್ಯರ ಸಮಿತಿಯೊಂದನ್ನು ರಚಿಸಲಾಗಿದೆ. ಪ್ರತೀ ಆಸ್ಪತ್ರೆಗಳಿಗೂ ಮಾಹಿತಿ ನೀಡುವ ಕುರಿತು ಫಾರ್ಮೆಟ್ ವೊಂದನ್ನು ಸಿದ್ದಪಡಿಸಿ ನೀಡಲಾಗಿದೆ.

ಹೀಗಾಗಿ ನಿತ್ಯವೂ ಆಸ್ಪತ್ರೆಗಳು ಕಡ್ಡಾಯವಾಗಿ ವರದಿಯನ್ನು ನೀಡಲೇಬೇಕು. ಇನ್ನು ಸಾರ್ವಜನಿಕರೂ ಕೂಡ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.