ಮಂಗಳೂರು : ಕರ್ನಾಟಕ – ಕೇರಳ – ಗೋವಾಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ನೇತ್ರಾವತಿ ಸೇತುವೆ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಇತ್ತೀಚಿನ ದಿನಗಳಲ್ಲಂತೂ ಸೇತುವೆಯಿಂದ ನದಿಗೆ ಜಿಗಿದು ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಯ ಜೊತೆಗೆ ಸಿಸಿ ಕ್ಯಾಮರಾ ಅಳವಡಿಸಲು ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಮುಂದಾಗಿದೆ.

ನೇತ್ರಾವತಿ ಸೇತುವೆ ಅಪಾಯಕಾರಿಯಾಗಿದ್ದು ಅಹಿತಕರ ಘಟನೆಗಳ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದಲೂ ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ದೂರುಗಳು ಬಂದಿತ್ತು. ಹೀಗಾಗಿ ನೇತ್ರಾವತಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಸಿದ್ದಪಡಿಸಲಾಗುತ್ತಿದೆ. ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಸೇತುವೆಯ ಎರಡು ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಸುವ ಕಾಮಗಾರಿಗೆ ಕ್ರಿಯಾ ಯೋಜನೆ ತಯಾರಿಸಿ ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಅನುಮೋದನೆ ನೀಡುವ ಕುರಿತು ನಿರ್ಧರಿಸಲಾಗಿದ್ರೆ, ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶ್ರೀಕಾಂತ್ ರಾವ್, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.