ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಬೇಕೆ ಅಥವಾ ನಡೆಸಬೇಕೆ ಅನ್ನೋ ಕುರಿತು ಮಹತ್ವದ ಸಭೆ ನಡೆಯಲಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿವಾಲ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಕೂಡ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ವಿಪರೀತವಾಗಿದ್ದು, ಲಾಕ್ ಡೌನ್ ಜಾರಿಯಲ್ಲಿದೆ. ಕೊರೊನಾ ಸೋಂಕಿನ ಜೊತೆಗೆ ಬ್ಲ್ಯಾಕ್ ಹಾಗೂ ವೈಟ್ ಫಂಗಸ್ ಸೋಂಕು ಪತ್ತೆಯಾಗುತ್ತಿದೆ.
ಕೊರೊನಾ 2ನೇ ಅಲೆಯ ಜೊತೆಗೆ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮವನ್ನು ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಪರೀಕ್ಷೆಯನ್ನು ನಡೆಸಲು ಸಾಧ್ಯವಿಲ್ಲ ಹೀಗಾಗಿ ಪರೀಕ್ಷೆಯನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.
