ಕಾಲೇಜು ಪುನರಾರಂಭ : ದ.ಕ. 29, ಉಡುಪಿ 7 ವಿದ್ಯಾರ್ಥಿಗಳಿಗೆ ಕೊರೊನಾ

ಮಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಕಾಲೇಜುಗಳು ಪುನರಾರಂಭಗೊಂಡಿವೆ. ಆದರೆ ಕಾಲೇಜುಗಳು ಪುನರಾರಂಭಗೊಂಡು ವಾರ ಕಳೆಯುವ ಮೊದಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 36 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಸರಕಾರ ಪ್ರಾಯೋಗಿಕವಾಗಿ ಆರಂಭದ ಹಂತದಲ್ಲಿ ಪದವಿ ತರಗತಿಗಳನ್ನು ಆರಂಭ ಮಾಡಿತ್ತು. ಆದರೆ ಕಾಲೇಜುಗಳು ಪುನರಾರಂಭಗೊಂಡಿದ್ದರೂ ಕೂಡ ತರಗತಿ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ತೀರಾ ಕಡಿಮೆಯಾಗಿತ್ತು. ಆದ್ರೆ ಕಾಲೇಜಿಗೆ ಹಾಜರಾದ ವಿದ್ಯಾರ್ಥಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ 7 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.

ಮಂಗಳೂರು ನಗರದಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಮಂಗಳೂರು 16, ಬಂಟ್ವಾಳ 7, ಸುಳ್ಯ 4, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕುಗಳಲ್ಲಿ ತಲಾ ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಅದ್ರಲ್ಲೂ ಹೊರ ರಾಜ್ಯದಿಂದ ಬಂದಿದ್ದ 6 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಆರಂಭಿಕ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಡುತ್ತಿರುವುದು ಆತಂಕವನ್ನು ಮೂಡಿಸಿದೆ. ಕಾಲೇಜುಗಳಲ್ಲಿ ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಎಚ್ಚರಿಕೆಯನ್ನು ವಹಿಸಲಾಗುತ್ತಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಕೊರೊನಾ ತಪಾಸಣೆಯನ್ನು ಕೂಡ ಇನ್ನಷ್ಟು ಚುರುಕಾಗಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ವಿದ್ಯಾರ್ಥಿಗಳಲ್ಲಿ ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳಿಗೂ ಮನೆಯಲ್ಲಿಯೇ ಕ್ವಾರಂಟೈನ್ ಆಗಿರಲು ಸೂಚನೆಯನ್ನು ನೀಡಲಾಗಿದೆ. ಅವಳಿ ಜಿಲ್ಲೆಗಳಲ್ಲಿ ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ ಕೊರೊನಾ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಖಾಸಗಿ ಲ್ಯಾಬ್ ಗಳಲ್ಲಿಯೂ ಪರೀಕ್ಷೆ ನಡೆಸಲು ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುಂದಾಗಿದೆ.

ಬಹುತೇಕ ಕಾಲೇಜುಗಳಲ್ಲಿ ಶೆ.30 ಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಒಂದೊಮ್ಮೆ ಹಾಜರಾತಿಯ ಸಂಖ್ಯೆಯಲ್ಲಿ ಹೆಚ್ಚಳವಾದ್ರೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳವಾದ್ರೆ ಕೊರೊನಾ ಪರೀಕ್ಷೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿದ್ದತೆಗಳನ್ನು ಮಾಡಿಕೊಂಡಿದೆ.

Comments are closed.