ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಆರಂಭಿಸದಿರಲು ರಾಜ್ಯ ಸರಕಾರ ಮುಂದಾಗಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅಕ್ಟೋಬರ್ 15ರ ವರೆಗೆ ಶಾಲೆಗಳಿಗೆ ಬರದಂತೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳನ್ನು ಆರಂಭಿಸುವ ಕುರಿತು ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿ ಹೊರಡಿಸಿತ್ತು. ಅಲ್ಲದೇ ಅಗಸ್ಟ್ 29ರ ಮಾರ್ಗಸೂಚಿಯಂತೆ ಕಂಟ್ಮೈನೆಂಟ್ ಝೋನ್ ಹೊರತು ಪಡಿಸಿ 9 ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು ವಿದ್ಯಾರ್ಥಿಗಳ ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಲು ಅನುಮತಿಯನ್ನು ನೀಡಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕ್ಷೇಮಕರವಲ್ಲ. ಹೀಗಾಗಿ ಅಕ್ಟೋಬರ್ 15ರ ವರೆಗೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳನ್ನು ಆರಂಭಿಸುವಂತಿಲ್ಲ. ಅಲ್ಲದೇ ವಿದ್ಯಾರ್ಥಿಗಳು ಕೂಡ ಶಾಲೆ, ಕಾಲೇಜುಗಳಿಗೆ ಬರುವಂತಿಲ್ಲ ಎಂದು ಸೂಚಿಸಿದೆ.
