ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು : ಅನುತೀರ್ಣರಾದವರು ಪರೀಕ್ಷೆಯಿಲ್ಲದೇ ಪಾಸ್

0

ಬೆಂಗಳೂರು : ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣರಾದವರನ್ನು ಪಾಸ್ ಮಾಡಲು ಶಿಕ್ಷಣ ಇಲಾಖೆ ಮಹತ್ವದ ನಿರ್ಣಯವನ್ನು ಕೈಗೊಂಡಿದೆ. ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜುಲೈ 16ರಿಂದ ಜುಲೈ 27ರ ವರೆಗೆ ಪ್ರಥಮ ಪಿಯುಸಿಗೆ ಪೂರಕ ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಘೋಷಣೆಯನ್ನು ಮಾಡಿತ್ತು. ಸುಮಾರು 60 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬೇಕಾಗಿತ್ತು. ಆದರೆ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದು ಅಸಾಧ್ಯವಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಪೂರಕ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪ್ರಥಮ ಪಿಯುಸಿಯ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳ ಪರೀಕ್ಷೆಗೆ ಹಾಜರಾಗಿ ಅನುತೀರ್ಣಗೊಂಡಿದ್ದರೆ ಅಂತಹ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುತ್ತದೆ.

ಇನ್ನು ಅನಾರೋಗ್ಯ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಒಂದೂ ಪರೀಕ್ಷೆಗೆ ಹಾಜರಾಗದೇ ಇರುವವರಿಗೆ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾದ ನಂತರದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬರೆಯಿಸಿ ಅವರನ್ನು ತೇರ್ಗಡೆಗೊಳಿಸಲಾಗುತ್ತದೆ. ಆದರೆ ಹಾಜರಾತಿಯ ಕೊರತೆಯಿಂದ ಪರೀಕ್ಷೆ ಬರೆಯಲು ಅವಕಾಶ ಸಿಗದವರನ್ನು ತೇರ್ಗಡೆಗೊಳಿಸಲು ಸಾಧ್ಯವಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Leave A Reply

Your email address will not be published.