ಬೆಂಗಳೂರು : ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲೆಗಳಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ.
ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದು, ರಾಜ್ಯ ಶಾಲಾ ಶಿಕ್ಷಣ ಆಯೋಗ ಸ್ಥಾಪನೆ, ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ, ಪಂಚಾಯತ್ ಹಾಗೂ ವಾರ್ಡ್ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳ ಆರಂಭದ ಜೊತೆಗೆ 10 ಸಾವಿರ ಶಿಕ್ಷಣ ನೇಮಕಾತಿಯ ಕುರಿತು ಚರ್ಚೆ ನಡೆಸಲಾಗಿದ್ದು, ಪ್ರಮುಖವಾಗಿ ಮುಂದಿನ ಬಜೆಟ್ ನಲ್ಲಿ ಶಿಕ್ಷಕರ ನೇಮಕಾತಿ ಸೇರಿದಂತೆ ಒಟ್ಟು 5 ಪ್ರಮುಖ ಪ್ರಸ್ತಾವನೆಗಳನ್ನು ಮಂಡಿಸಲು ಯೋಜನೆ ರೂಪಿಸಲಾಗಿದೆ.
ಸದ್ಯದಲ್ಲಿಯೇ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪ್ರಮುಖವಾಗಿ ಶಿಕ್ಷಣ ಇಲಾಖೆಯಲ್ಲಿನ ಬೇಡಿಕೆ ಈಡೇರಿಕೆ ಶಿಕ್ಷಣ ಇಲಾಖೆ ಸಿದ್ದತೆಗಳನ್ನು ಮಾಡಿಕೊಂಡಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಶಿಕ್ಷಕ ನೇಮಕಾತಿ ಆದೇಶಕ್ಕೆ ಶೀಘ್ರದಲ್ಲಿಯೇ ಅನುಮೋದನೆ ಸಿಗುವ ಸಾಧ್ಯತೆಯಿದೆ.