ಚಿಕ್ಕಮಗಳೂರು : ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗಳಿಗೆ ತೆರಳದಂತೆ ರಜೆ ಘೋಷಣೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಆದರೆ ಭಾರೀ ಮಳೆಯ ನಡುವಲ್ಲೇ ಶಿಕ್ಷಕರು ಶಾಲೆಗೆ ಹಾಜರಾಗುತ್ತಿದ್ದಾರೆ. ಬಸ್ ಸೌಕರ್ಯಗಳಿಲ್ಲದೇ ಶಾಲೆಗೆ ತೆರಳುವುದು ಶಿಕ್ಷಕರಿಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಮಲೆನಾಡು ಹಾಗೂ ಕರಾವಳಿ ಭಾಗದ ಶಾಲೆಗಳ ಶಿಕ್ಷಕರಿಗೆ ರಜೆಯನ್ನು ನೀಡುವಂತೆ ಆಯಾಯ ಜಿಲ್ಲಾಧಿಕಾರಿಗಳಿಗೆ ತುರ್ತಾಗಿ ಸೂಚನೆಯನ್ನು ನೀಡುವಂತೆ ಆಗ್ರಹಿಸಿದ್ದಾರೆ.

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿನ ಮಳೆಯಿಂದಾಗುತ್ತಿರುವ ಸಮಸ್ಯೆಯನ್ನು ನಾನು ಅರಿತಿದ್ದೇನೆ. ಕಳೆದೆರಡು ದಿನಗಳ ಹಿಂದೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೂಡ ಶೃಂಗೇರಿಗೆ ಆಗಮಿಸಿದ್ದು, ಮಳೆಯ ಸಮಸ್ಯೆಯನ್ನು ಅವರು ಅರಿತಿದ್ದಾರೆ ಎಂದು ಭಾವಿಸಿದ್ದೇನೆ. ಹೀಗಾಗಿ ತುರ್ತಾಗಿ ರಜೆಯನ್ನು ಘೋಷಿಸಬೇಕಾಗಿದೆ. ಇನ್ನು ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ವ್ಯವಸ್ಥೆಯ ಜಾರಿಯ ಕುರಿತು ಈಗಾಗಲೇ ಮಾತುಕತೆ ನಡೆಸಿದ್ದೇನೆ. ಅಲ್ಲದೇ ಶೀಘ್ರದಲ್ಲಿಯೇ ಶಿಕ್ಷಣ ಸಚಿವರನ್ನು ಭೇಟಿಯಾಗಿ ಮಾತಕತೆ ನಡೆಸುವುದಾಗಿ ತಿಳಿಸಿದ್ದಾರೆ.