Heavy rain in Dakshina Kannada Red Alert : ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಕೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜುಲೈ 19 ರಂದು ಭಾರೀ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಐದು ತಾಲೂಕುಗಳ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಬಾರೀ ಅವಾಂತರವನ್ನೇ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಉಡುಪಿ ಶಾಲೆಗಳಿಗೆ ನಾಳೆ (ಜುಲೈ 19) ರಜೆ ಘೋಷಣೆ : ಪುನರ್ವಸು ಮಳೆಯ ಅಬ್ಬರಕ್ಕೆ ಕರಾವಳಿ ತತ್ತರ
ಮಂಗಳೂರು, ಉಳ್ಳಾಲ, ಮೂಡಬಿದಿರೆ ತಾಲೂಕುಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ದುರ್ಬಲ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಮಕ್ಕಳಿಗೆ ಪಾಠ ಬೋಧನೆ ಮಾಡುವಂತಿಲ್ಲ. ರಜೆ ನೀಡಿರುವ ತಾಲೂಕುಗಳಲ್ಲಿ ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶವಿದ್ದಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನದಲ್ಲೂ ಶಾಲೆಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಉಡುಪಿ ಜಿಲ್ಲೆಯಲ್ಲಿಯೂ ಜುಲೈ ೧೯ರಂದು ಭಾರೀ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಹಾಸನ, ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರಜೆ ಮುಂದುವರಿಕೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆ ಮಳೆಯಿಂದ ತತ್ತರಿಸಿ ಹೋಗಿದೆ.
ಇದನ್ನೂ ಓದಿ : 3 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ನಿಮ್ಮ ಪಡಿತರ ಚೀಟಿ ಚಾಲ್ತಿಯಲ್ಲಿದ್ಯಾ ಚೆಕ್ ಮಾಡಿ
ಹಾಸನ – ಮಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಇನ್ನು ಅಂಕೋಲ ಬಳಿಯ ಶಿರೂರಿನಲ್ಲಿ ಗುಡ್ಡ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಗುಡ್ಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ ೮ಕ್ಕೆ ಏರಿಕೆಯಾಗಿದೆ. ಸಂಪಾಜೆ ಘಾಟ್ ರಸ್ತೆಯಲ್ಲಿಯೂ ಗುಡ್ಡ ಕುಸಿತ ಉಂಟಾಗಿದೆ.
ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ
Heavy rain in Dakshina Kannada Red Alert : Holiday announced for schools and puc in Puttur, Sulya, Bantwala, Belthangadi, Kadaba taluks on July 19