ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಬದಲಾವಣೆ ಮಾಡಿದೆ. ಜೂನ್ 15ರಿಂದ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಆದೇಶ ಹೊರಡಿಸಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಆದರೆ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಿಗದಿಯಂತೆಯೇ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಆದೇಶವನ್ನು ಹೊರಡಿಸಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜೂನ್ 1ರಿಂದಲೇ ಪುನರ್ ಮನನ ತರಗತಿಗಳನ್ನು ಆರಂಭಿಸಲು ಸೂಚನೆಯನ್ನು ನೀಡಿದೆ. ರಾಜ್ಯದಲ್ಲಿ ಜೂನ್ 21ರಿಂದ ಜುಲೈ 5ರ ವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆಯನ್ನು ನೀಡಿದೆ.

ರಾಜ್ಯದಲ್ಲಿ ಜೂನ್ 15ರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್ 27ರಿಂದ ಜೂನ್ 15ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸ ಲಾಗಿದ್ದು, ಪ್ರೌಢಶಾಲೆಗಳಿಗೆ ಎಪ್ರಿಲ್ 27 ರಿಂದ ಮೇ 31ರ ವರೆಗೆ ರಜೆ ನೀಡಲಾಗಿದೆ.
