Mangalore V V Exams : ಅಗಸ್ಟ್‌ 11 ರಿಂದ ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಆದ್ರೀಗ ಬಾಕಿ ಉಳಿದಿರುವ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಅಗಸ್ಟ್‌ 11 ರಿಂದ ನಡೆಸುವಂತೆ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದ್ದಾರೆ.

ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆ ರದ್ದಾದ ಬೆನ್ನಲ್ಲೇ ಮಂಗಳೂರು ವಿವಿ ಕುಲ ಸಚಿವರು ಬಾಕಿ ಉಳಿದ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಶೇಕಡಾ 80ರಷ್ಟು ಪರೀಕ್ಷೆಗಳು ಮುಗಿದಿದ್ದು, ಕೇವಲ 20 ಶೇಕಡಾ ಪರೀಕ್ಷೆ ಬಾಕಿ ಉಳಿದಿದೆ. ಹೀಗಾಗಿ ಕೊರೊನಾ ಕಟ್ಟುನಿಟ್ಟಿನ ಮಾರ್ಗಸೂಚಿಯ ಪಾಲನೆಯೊಂದಿಗೆ ಪರೀಕ್ಷೆ ಮುಗಿಸುವುದಾಗಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು.

ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿಕಾಸರಗೋಡು ಹಾಗೂ ಮಂಗಳೂರು ನಡುವೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದೇವೆ. ಯಾವುದೇ ರೀತಿಯ ಅನಗತ್ಯ ಸಂಚಾರವನ್ನು ರದ್ದು ಪಡಿಸಲಾಗಿದೆ. ನೆರೆಯ ರಾಜ್ಯ ಕೇರಳದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ಟ್ 4 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಅನುಕೂಲವಿದ್ದರೆ ಮಾತ್ರವೇ ಪರೀಕ್ಷೆಗೆ ಹಾಜರಾಗಬಹುದು. ಅನಾನೂಕುಲವಾಗುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಬೇಕು. ಅಸೈನ್ಮೆಂಟ್‌ಗಳನ್ನು ಆನ್‌ಲೈನ್‌ ಅಥವಾ ಅಂಚೆ ಮೂಲಕ ಕಳುಹಿಸಲು ಅವಕಾಶ ನೀಡಬೇಕು. ಕೊರೊನಾ ಸೋಂಕಿತ ಹಾಗೂ ಅನಾರೋಗ್ಯ ಪೀಡಿತರಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Comments are closed.