ಮುದ್ರಿತ ಅಂಕಪಟ್ಟಿಗೆ ಕೊಕ್..! 2027ರಿಂದ ವಿದ್ಯಾರ್ಥಿಗಳಿಗಿಲ್ಲ ಮುದ್ರಿತ ಅಂಕಪಟ್ಟಿ – ಸಚಿವ ಮಧು ಬಂಗಾರಪ್ಪ ಮಾಹಿತಿ
Digital Marks Card: ರಾಜ್ಯಾದ್ಯಂತ ನಿನ್ನೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದಿದ್ದ 6.9 ಲಕ್ಷ ವಿದ್ಯಾರ್ಥಿಗಳ ಪೈಕಿ 5.6 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ. ಇನ್ನು ದ್ವಿತೀಯ ಪಿಯುಸಿ ಫಲಿತಾಂಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಇನ್ನು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ವಾಣಿಜ್ಯ, ವಿಜ್ಞಾನ ಹಾಗೂ ಕಲಾ ಮೂರು ವಿಭಾಗಗಳಲ್ಲಿಯೂ ವಿದ್ಯಾರ್ಥಿನಿಯರೇ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ವಿದ್ಯಾರ್ಥಿಗಳ ಅಂಕಪಟ್ಟಿ ವಿಚಾರದಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಮೂಲಕ ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕ ಅಂಕಪಟ್ಟಿ ದೊರೆಯಲಿದೆ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ಆರ್ಥಿಕ ಹೊರೆ ಕಡಿಮೆ ಮಾಡುವ ದೃಷ್ಠಿಯಿಂದ ಭೌತಿಕ ಅಂಕಪಟ್ಟಿಗೆ ಕೊಕ್ ನೀಡಲಾಗುತ್ತಿದೆ.
ಇದನ್ನೂ ಓದಿ: PUC Result 2026 : ಉಡುಪಿ ಪ್ರಥಮ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್‌ನ ದೀಕ್ಷಾ ರಾಜ್ಯಕ್ಕೆ ಪ್ರಥಮ
ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಕೇವಲ ಡಿಜಿಟಲ್ ಅಂಕಪಟ್ಟಿ ಮಾತ್ರ ದೊರೆಯಲಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆ ನಡೆಯಲಿದೆ. ಆದರೆ ಪೂರಕ ಪರೀಕ್ಷೆಯಲ್ಲೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ -3 ಬರೆಯಲು ಅವಕಾಶ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.



