ಬೆಂಗಳೂರು : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಲಾಗಿದೆ. ಇಂಗ್ಲೀಷ್ ಪರೀಕ್ಷೆಯಲ್ಲಿ ಒಟ್ಟು 23,635 ಗೈರು ಹಾಜರಾಗಿದ್ದಾರೆ. ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳು ಯಾವ ಕಾರಣಕ್ಕೆ ಹಾಜರಾಗಿಲ್ಲ ಅನ್ನುವ ಕಾರಣವನ್ನು ಗುರುತಿಸಿ, ಅದು ನೈಜವಾದ ಕಾರಣವಾಗಿದ್ರೆ, ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳು ನಡೆಸಲಿರುವ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುವುದು. ಯಾವುದೇ ವಿದ್ಯಾರ್ಥಿ ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂಗ್ಲೀಷ್ ಪರೀಕ್ಷೆಗೆ ಒಟ್ಟು 5,96,300 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಆದ್ರೆ 5,72,665 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಮೂಲಕ 23,635 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.ಈ ಪೈಕಿ ಕಲಬುರಗಿ (1,748 ವಿದ್ಯಾರ್ಥಿಗಳು) ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಹಾಗೂ ಕೊಡಗು ಜಿಲ್ಲೆಯಲ್ಲಿ (99 ವಿದ್ಯಾರ್ಥಿಗಳು ) ಅತೀ ಕಡಿಮೆ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.

ಈ ಬಾರಿ ಶೇ.96 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ಬಾರಿಯ (2019ರಲ್ಲಿ) ಇಂಗ್ಲೀಷ್ ಪರೀಕ್ಷೆ 6,71,635 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು ಆದರೆ ಹಾಜರಾಗಿದ್ದು 6,34,992 ವಿದ್ಯಾರ್ಥಿಗಳು ಮಾತ್ರ ಹೀಗಾಗಿ ಕಳೆದ ಬಾರಿ 36,642 ವಿದ್ಯಾರ್ಥಿಗಳು ಗೈರು ಹಾಜರಾಗುವ ಮೂಲಕ ಶೇ.94ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಕೊರೊನಾ ಆತಂಕದ ನಡುವಲ್ಲೇ ಅತೀ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಇನ್ನು ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಆಧ್ಯತೆಯನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಮನೆಯಿಂದಲೇ ಬಿಸಿ ನೀರನ್ನು ತಂದಿದ್ದಾರೆ. ರಾಜ್ಯದಾದ್ಯಂತ ಒಟ್ಟು 1,016 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲಾ ಕೇಂದ್ರಗಳಲ್ಲಿ 430, ತಾಲೂಕು ಕೇಂದ್ರಗಳಲ್ಲಿ 328, ಹೋಬಳಿ ಕೇಂದ್ರಗಳಲ್ಲಿ 258 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಸುಮಾರು 18,529 ವಿದ್ಯಾರ್ಥಿಗಳು ಪರೀಕ್ಷಾ ಕೇಮದ್ರಗಳನ್ನು ಬದಲಾಯಿಸಿಕೊಂಡು ಪರೀಕ್ಷೆಯನ್ನು ಬರೆದಿದ್ದಾರೆ. ಅಲ್ಲದೇ ಹೊರ ರಾಜ್ಯಗಳ ಸುಮಾರು 1,889 ವಿದ್ಯಾರ್ಥಿಗಳು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 23,064 ಕೊಠಡಿಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು. ಆದರೆ ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ 13,528 ಕೊಠಡಿಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಒಟ್ಟು 36,592 ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿಲ್ಲ. ಅಲ್ಲದೇ ಪರೀಕ್ಷಾ ನಕಲು ಮಾಡಿ ಸಿಕ್ಕಿ ಬಿದ್ದಿರುವ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಅಂತರ ಪಾಲಿಸದವರ ವಿರುದ್ದ ಕ್ರಮ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಾಮಾಜಿಕ ಅಂತರ ಕಾಪಾಡುವಂತೆ ಸೂಚನೆಯನ್ನು ನೀಡಲಾಗಿತ್ತು. ಆದ್ರೆ ರಾಜ್ಯದ 24 ರಿಂದ 26 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದಿರುವುದು ಗಮನಕ್ಕೆ ಬಂದಿದೆ, ಇಂತಹ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡದವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ನಡೆಸುವ ಕುರಿತು ಸೂಚನೆಯನ್ನು ನೀಡಲಾಗಿದೆ. ಅಲ್ಲದೇ ಘಟನೆಗೆ ಕಾರಣರಾದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

20 ವಿದ್ಯಾರ್ಥಿಗಳಿಗೆ ಅನಾರೋಗ್ಯ !
ರಾಜ್ಯದಾದ್ಯಂತ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳು ಅನಾರೋಗ್ಯದ ಸಮಸ್ಯೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಕಂಟೈನ್ಮೆಂಟ್ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿಯೇ ಪರೀಕ್ಷೆ ಬರೆಯಿಸಲಾಗಿದೆ.