ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಇಂದು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 5.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಇದೀಗ ರಾಜ್ಯ ಸರಕಾರಕ್ಕೆ ಅಗ್ನಿ ಪರೀಕ್ಷೆಯನ್ನು ತಂದೊಡ್ಡಿದೆ.

ಕೊರೊನಾ ವೈರಸ್ ಸೋಂಕಿನ ಆತಂಕದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತೋ ಇಲ್ಲವೋ ಅನ್ನುವ ಆತಂಕವಿತ್ತು. ಆದ್ರೆ ರಾಜ್ಯ ಸರಕಾರ ಪರೀಕ್ಷೆ ನಡೆಸಲು ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗಾಗಿ ಜಿಲ್ಲಾ ಕೇಂದ್ರಗಳಲ್ಲಿ 430, ತಾಲೂಕು ಕೇಂದ್ರದಲ್ಲಿ 328 ಹಾಗೂ ಹೋಬಳಿ ಮಟ್ಟದಲ್ಲಿ 258 ಪರೀಕ್ಷಾ ಕೇಂದ್ರ ಸೇರಿದಂತೆ ರಾಜ್ಯದಾದ್ಯಂತ 1,016 ಪರೀಕ್ಷಾ ಕೇಂದ್ರಗಳನ್ನು ತರೆಯಲಾಗಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನಿ ಕಲ್ಪಿಸಲಾಗಿದ್ದು, 18,248 ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಒಂದೊಮ್ಮೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಇದ್ದವರಿಗೂ ಕೂಡ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷಾ ಕೊಠಡಿ, ಬಸ್ ಸಂಚಾರ, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಪ್ರಮುಖವಾಗಿ ಪರೀಕ್ಷೆ ಆರಂಭಕ್ಕೂ ಮುನ್ನ ಪ್ರತೀ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.

ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮಾಸ್ಕ್ ಬಳಕೆ ಮಾಡುವಂತೆ ಸೂಚಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿ ಮಾಸ್ಕ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪ್ರತೀ 200 ವಿದ್ಯಾರ್ಥಿಗಳಿಗೆ 1 ರಂತೆ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ.

ಪ್ರತೀ ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಇಬ್ಬರು ಸಿಬ್ಬಂಧಿಗಳು ನೇಮಕ ಮಾಡಲಾಗಿದ್ದು. ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಅಲ್ಲದೇ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವ ನಿಟ್ಟಿನಲ್ಲಿ ಉಚಿತ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ.