ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ಭೀತಿಯ ನಡುವಲ್ಲೇ ಜೂನ್ 18ರಂದು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ರಾಜ್ಯದಲ್ಲಿ 5.85 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯ ಬರೆಯುತ್ತಿದ್ದು, ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷಾ ಕೊಠಡಿ, ಬಸ್ ಸಂಚಾರ, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಪ್ರಮುಖವಾಗಿ ಪರೀಕ್ಷೆ ಆರಂಭಕ್ಕೂ ಮುನ್ನೆ ಪ್ರತೀ ಪರೀಕ್ಷಾ ಕೇಂದ್ರಗಳನ್ನು ಸ್ಯಾಂಟೈಸ್ ಮಾಡಬೇಕು. ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮಾಸ್ಕ್ ಧರಿಸಿರಲೇ ಬೇಕು. ವಿದ್ಯಾರ್ಥಿಗಳಿಗೆ ಹೆಚ್ಚುವರಿ ಮಾಸ್ಕ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಪ್ರತೀ 200 ವಿದ್ಯಾರ್ಥಿಗಳಿಗೆ 1 ರಂತೆ ತಪಾಸಣಾ ಕೇಂದ್ರಗಳನ್ನು ತೆರೆದಿಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.

ಇನ್ನು ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಇಬ್ಬರು ಸಿಬ್ಬಂಧಿಗಳು ನೇಮಕ ಮಾಡಬೇಕು. ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆಯನ್ನು ಕಲ್ಪಿಸಬೇಕು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವ ನಿಟ್ಟಿನಲ್ಲಿ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ರಾಜ್ಯ ಸರಕಾರ ಈ ಕುರಿತು ಈಗಾಗಲೇ ಸಾರಿಗೆ ಇಲಾಖೆಗೆ ಆದೇಶ ಹೊರಡಿಸಿದೆ. ಪರೀಕ್ಷೆಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಅಲ್ಲದೇ, ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆಯನ್ನು ನೀಡಲಾಗಿದೆ.