ಬೆಂಗಳೂರು : ರಾಜ್ಯ ಸರಕಾರ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿತ್ತು. ಎಸ್ಎಸ್ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿತ್ತು. ಆದ್ರೀಗ ಫಲಿತಾಂಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸಿಬಿಎಸ್ಇ ಹಾಗೂ ಐಸಿಎಸ್ ಇ ಬೋರ್ಡ್ 12ನೇ ತರಗತಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿಯೂ ಪದವಿಪೂರ್ವ ಶಿಕ್ಷಣ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನೇ ರದ್ದು ಮಾಡಿತ್ತು. ಆದರೆ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಕುರಿತು ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಗೊಂದಲದ ನಿರ್ಧಾರದ ವಿರುದ್ದ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದ್ರೀಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗುತ್ತಿದ್ದಂತೆಯೇ ಹೈಕೋರ್ಟ್ ಕೂಡ ಗರಂ ಆಗಿದೆ. ಹೊಸ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ರಿಲೀಟರ್ಸ್ ಗಳಿಗೆ ಮಾತ್ರವೇ ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಹೈಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಗುರುವಾರದ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿದೆ.