ಮಂಗಳೂರು : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಕಾಣಿಸುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ೨೪ ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ (Red alert holiday announced) ಮಾಡಿದೆ. ಜೊತೆಗೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಲ್ಲಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದೆ. ಅಲ್ಲದೇ ಮುಂದಿನ ೨೪ ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ ೭ ರಂದು ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ಜಾಗ್ರತೆವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಚಾಚೂ ತಪ್ಪದೇ ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ – ಕಾಲೇಜಿಗೆ ರಜೆ, ಆರೆಂಜ್ ಅಲರ್ಟ್ ಘೋಷಣೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ನಾಳೆ ರಜೆ (Schools and colleges holiday) ಘೋಷಣೆ ಮಾಡಲಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದಲೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಜಿಲ್ಲೆಯ ಜೀವನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಇನ್ನೊಂದೆಡೆಯಲ್ಲಿ ಕಡಲ ತೀರದಲ್ಲಿ ಕಡಲ್ಕೊರೆತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನಿವಾಸಿಗಳು ಆತಂಕದಲ್ಲಿಯೇ ಬದುಕು ಸಾಗಿಸುತ್ತಿದ್ದಾರೆ. ಈ ನಡುವಲ್ಲೇ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜುಲೈ ೭ರಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಣೆಯನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ರಜೆಯ ಅವಧಿಯನ್ನು ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಗೆ ಕಾಲೇಜು ಗೋಡೆ ಕುಸಿತ: 3 ಕಾರುಗಳಿಗೆ ಹಾನಿ
ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಮೂಡುಬಿದಿರೆಯಲ್ಲಿ ಇರುವ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ (ಎಂಐಟಿಇ) ಕಾಲೇಜಿನ ಕಾಂಪೌಂಡ್ ಗೋಡೆ ಕುಸಿದು ಮೂರು ಕಾರುಗಳು ಜಖಂಗೊಂಡಿವೆ. ಘಟನೆ ನಡೆದಾಗ ಹೊಸ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಬಾಳೂರು ಹೋಬಳಿ, ಕಳಸ ತಾಲೂಕು ಹಾಗೂ ಮೂಡಿಗೆರೆ ತಾಲೂಕಿನ ಶೃಂಗೇರಿ ಶಿಕ್ಷಣ ಸಂಸ್ಥೆಗಳಿಗೆ (ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಂಸ್ಥೆ) ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 05-07-2022 ಮತ್ತು 06-07-2022 ರಂದು ರಜೆ ಘೋಷಿಸಲಾಗಿದೆ. ಇನ್ನೂ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 06-07-2022 ರಿಂದ 09-07-2022 ರ ವರೆಗೆ ರಜೆ ಘೋಷಿಸುವುದು ಅಗತ್ಯ ಎಂದು ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಅಂಬಳೆ ಮತ್ತು ಲಕ್ಕ ಹೋಬಳಿ ಹೊರತುಪಡಿಸಿ ಶಾಲೆಗಳಿಗೆ ದಿನಾಂಕ 06-07-2022 ರಿಂದ 09-07-2022 ರವರೆಗೆ ರಜೆ ಘೋಷಿಸ ಲಾಗಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮತ್ತು ಎನ್.ಆರ್.ಪುರ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ದಿನಾಂಕ 09-07-2022 ರವರೆಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
Red alert holiday announced for schools colleges tomorrow in Dakshin Kannada district