ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ನಡುವಲ್ಲೇ ಸಪ್ಟೆಂಬರ್ 21ರಿಂದ ವಿದ್ಯಾರ್ಥಿಗಳು ಶಾಲೆಗೆ ತೆರಳಿ ಪಠ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳುವಂತೆ ಸೂಚನೆಯನ್ನು ನೀಡಲಾಗಿತ್ತು. ಆದ್ರೀಗ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದ್ದು, ಸಪ್ಟೆಂಬರ್ ಅಂತ್ಯದ ವರೆಗೂ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಆದೇಶವನ್ನು ಹೊರಡಿಸಿದ್ದು, ಕೊರೊನಾ ಆತಂಕದ ನಡುವಲ್ಲೇ ಶಾಲೆಗಳನ್ನು ಆರಂಭ ಮಾಡುವುದಿಲ್ಲ. ಈ ಹಿಂದೆ ದೇಶದಾದ್ಯಂತ ಅನ್ ಲಾಕ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆಯೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಶಿಕ್ಷಣ ಇಲಾಖೆ 9 ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಪೋಷಕರ ಅನುಮತಿಯನ್ನು ಪಡೆದು ಶಾಲೆಗಳಿಗೆ ಹಾಜರಾಗಬಹುದು ಎಂದು ಹೇಳಿತ್ತು.

ಶಾಲೆಗಳಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆಯನ್ನು ವಹಿಸುವಂತೆಯೂ ಸೂಚಿಸಲಾಗಿತ್ತು. ಆದ್ರೀಗ ಸಪ್ಟೆಂಬರ್ ಅಂತ್ಯದವರೆಗೂ ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸದಿರಲು ತೀರ್ಮಾನಿಸಲಾಗಿದೆ. ಅಲ್ಲದೇ ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ರಾಜ್ಯದಲ್ಲಿ ಅನ್ವಯಿಸದಿರಲು ನಿರ್ಧರಿಸಲಾಗಿದೆ. ಕೊರೊನಾ ಸೋಂಕು ರಾಜ್ಯದಲ್ಲಿ ಕಡಿಮೆಯಾಗುವವರೆಗೂ ರಾಜ್ಯದಲ್ಲಿ ಶಾಲೆ, ಕಾಲೇಜುಗಳನ್ನು ಆರಂಭ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರಕಾರ ಕಂಟೈನ್ಮೆಂಟ್ ಝೋನ್ ಹೊರತು ಪಡಿಸಿ ಉಳಿದ ಕಡೆಗಳಲ್ಲಿ 9 ರಿಂದ 12ನೇ ತರಗತಿಗಳ ವಿದ್ಯಾರ್ಥಿಗಳ ಸಂದೇಹ ಪರಿಹಾರಕ್ಕೆ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಅವಕಾಶವನ್ನು ಕಲ್ಪಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕ್ಷೇಮಕರವಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಅಲ್ಲದೇ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮವನ್ನು ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
