ಬೆಂಗಳೂರು : ರಾಜ್ಯದಲ್ಲಿ ಶಾಲಾರಂಭ ಮಾಡುವ ಕುರಿತು ಈಗಾಗಲೇ ಮ್ಯಾರಥಾನ್ ಸಭೆಯನ್ನು ನಡೆಸಿರುವ ಶಿಕ್ಷಣ ಇಲಾಖೆಯ ಆಯುಕ್ತರು ವರದಿಯೊಂದನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲ್ಲಿಸಿದ್ದಾರೆ.

ಶಿಕ್ಷಣ ಇಲಾಖೆಯ ಆಯುಕ್ತರು ಕಳೆದೊಂದು ವಾರದಿಂದಲೂ ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ, ಬಿಬಿಎಂಪಿ ಸಹಿತ ವಿವಿಧ ಇಲಾಖೆ, ಶಿಕ್ಷಣ ತಜ್ಞರು, ಖಾಸಗಿ ಶಾಲಾಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ್ದರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಕ್ರೋಡೀಕೃತ ವರದಿ ಸಿದ್ಧಪಡಿಸಿದ್ದಾರೆ.
SSLC ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಮುಖ್ಯವಾಗಿರುವುದರಿಂದ ಅವರಿಗೆ ತರಗತಿಗಳನ್ನು ಆರಂಭಿಸಬೇಕಾದ ಅನಿವಾರ್ಯತೆ ಇದೆ. ಇದರಿಂದ ಮೊದಲ ಹಂತದಲ್ಲಿ 9ರಿಂದ 12ನೇ ತರಗತಿಗಳನ್ನು ಪ್ರಾರಂಭಿಸಬಹುದು ಎಂದು ವರದಿಯಲ್ಲಿ ಪ್ರಸ್ತಾವಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಆಯುಕ್ತರು ಸಲ್ಲಿಸಿರುವ ವರದಿಯನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪರಿಶೀಲನೆ ನಡೆಸಿ ಶಿಕ್ಷಣ ಸಚಿವರಿಗೆ ಸಲ್ಲಿಸಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಕೆ ಮಾಡಲಿದ್ದಾರೆ.
ಯಡಿಯೂರಪ್ಪ ಅವರು ವರದಿಯನ್ನು ಪರಿಶೀಲನೆ ನಡೆಸಿ ಶಾಲಾರಂಭದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾಲೇಜುಗಳನ್ನು ಆರಂಭಿಸುವ ಕುರಿತು ಈಗಾಗಲೇ ಮಾರ್ಗಸೂಚಿ ಯನ್ನು ಹೊರಡಿಸಿರುವ ರಾಜ್ಯ ಸರಕಾರ ಶಾಲೆಗಳನ್ನು ಆರಂಭಿಸುವ ಕುರಿತು ತುರ್ತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.