SSLC EXAMS 2021 : ನಾಳೆ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ.

ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ನಾಳೆ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ10.30 ರಿಂದ 1.30ರ ವರೆಗೆ ಸಮಯಾವಕಾಶವನ್ನು ನೀಡಲಾಗುತ್ತಿದೆ. ಭಾಷಾ ವಿಷಯಕ್ಕೆ ಸಂಬಂಧಿಸಿದಂತೆ ಜುಲೈ 22ರಂದು ಪರೀಕ್ಷೆ ನಡೆಯಲಿದೆ.

ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. 4,72,643 ಬಾಲಕರು ಮತ್ತು 40,39,38 ಬಾಲಕಿಯರು ಸೇರಿದಂತೆ ಒಟ್ಟು 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯನ್ನು ಮಾಡಿಸಿಕೊಂಡಿದ್ದಾರೆ. 977ಪುನರಾವರ್ತಿತ ವಿದ್ಯಾರ್ಥಿಗಳು, ಖಾಸಗಿಯಾಗಿ 21,817 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪರೀಕ್ಷೆಗಾಗಿ 14,927 ಶಾಲೆಗಳ 73,066 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಬಾರಿ ಹೆಚ್ಚುವರಿಯಾಗಿ ಸಿಬ್ಬಂದಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 4,884 ಮುಖ್ಯ ಅಧಿಕ್ಷಕರು, 4,884 ಅಭಿರಕ್ಷಕರು, 80,389, ಕೊಠಡಿ ಮೇಲ್ವಿಚಾರಕರು, ಹಾಗೂ 4,884 ಸ್ಥಾನಿಕ ದಳದ ಸಿಬ್ಬಂದಿಗಳು ಪರೀಕ್ಷಾ ಕರ್ತವ್ಯ ನಿರ್ವಹಿಸಲಿದ್ದಾರೆ.

ವಿದ್ಯಾರ್ಥಿಗಳು ಬೆಳಗ್ಗೆ8.30ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚಿಸಲಾಗಿದ್ದು, ಆರೋಗ್ಯ ತಪಾಸಣೆ ಮುಗಿದ ನಂತರದಲ್ಲಿ ಅವರು ತಮ್ಮ ಕೊಠಡಿಗಳಲ್ಲಿಯೇ ಕುಳಿತು ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳ ಬಹುದಾಗಿದೆ. ಪರೀಕ್ಷೆಗೆ ಹಾಜರಾಗ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸ್‌ ಮಾಡಲಾಗುತ್ತದೆ. ಇನ್ನು ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ಸು ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ ಬಳಿಯಲ್ಲಿ ಯೇ ಬಸ್ಸುಗಳು ನಿಲುಗಡೆಗೆ ಅವಕಾಶ ಕಲ್ಪಿಸಲು ಶಿಕ್ಷಣ ಇಲಾಖೆ ನಿರ್ದೇಶನವನ್ನು ನೀಡಿದೆ. ಆದರೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Comments are closed.