ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ನಡೆಸಲು ಉದ್ದೇಶಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸಿಂಗ್ರೇಗೌಡ ಎಂಬವರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಲಾಗಿದೆ.

ರಾಜ್ಯದಲ್ಲಿ ಜುಲೈ 19 ಮತ್ತು 22 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜುಲೈ 19 ರಂದು ಸಮಾಜ ವಿಜ್ಞಾನ, ವಿಜ್ಞಾನ ಹಾಗೂ ಗಣಿತ ಪರೀಕ್ಷೆ ನಡೆಯಲಿದ್ರೆ. ಜುಲೈ 22 ರಂದು ಭಾಷಾ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಹಾಲ್ ಟಿಕೆಟ್ ಕೂಡ ಕಳುಹಿಸಲಾಗಿದೆ. ಸಕಲ ರೀತಿಯಲ್ಲಿಯೂ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುವುದಾಗಿಯೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಚಾರದಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಕೇಂದ್ರ ಸರಕಾರ ಈಗಾಗಲೇ ೧೨ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿಯೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಪಿಯುಸಿ ಪರೀಕ್ಷೆ ರದ್ದು ಮಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದು ಸರಿಯಲ್ಲ ಅನ್ನೋದು ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರಿಂದ ಅಭಿಪ್ರಾಯ ಕೇಳಿಬಂದಿದೆ. ಇನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಕೂಡ ಪರೀಕ್ಷೆಯನ್ನು ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಇನ್ನು ಪರೀಕ್ಷೆ ನಡೆಸಲು ಮುಂದಾಗಿದ್ದ ಆಂಧ್ರಪ್ರದೇಶ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿತ್ತು. ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾದ್ರೆ ಸರಕಾರವನ್ನು ಹೊಣೆಯನ್ನಾಗಿಸಿ ಮಾಡುವ ಎಚ್ಚರಿಕೆಯನ್ನು ನೀಡಿತ್ತು. ಇದೀಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಾ ಇಲ್ಲಾ ರದ್ದಾಗುತ್ತಾ ಅನ್ನೋ ಕುತೂಹಲ ಮೂಡಿಸಿದೆ.