SSLC ಪರೀಕ್ಷೆಯ ಕುರಿತು ಹೈಕೋರ್ಟ್ ಮಹತ್ವದ ಆದೇಶ

0

ಬೆಂಗಳೂರು : ಸಾಕಷ್ಟು ಗೊಂದಲಗಳಿಗೆ ಕಾರಣವಾಗಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಬೇಕೆಂದು ಆದೇಶಿಸಿಸಿದೆ.

ರಾಜ್ಯ ಸರಕಾರ ಮತ್ತು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆ ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸುವುದಾಗಿ ಘೋಷಿಸಿತ್ತು. ಆದರೆ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ನಿರ್ಧಾರವನ್ನು ಕೈಬಿಡುವಂತೆ ಕೋರಿ ವಕೀಲರಾಗಿರುವ ಎಂ.ಲೋಕೇಶ್ ಎಂಬವರು ಸೇರಿದಂತೆ ಒಟ್ಟು ಮೂರು ಮಂದಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಸಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ಯಾವುದೇ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ರಾಜ್ಯ ಸರಕಾರದ ಮಾರ್ಗ ಸೂಚಿಯಂತೆಯೇ ಕಟ್ಟುನಿಟ್ಟಾಗಿ ಪರೀಕ್ಷೆಯನ್ನು ನಡೆಸಬೇಕೆಂದು ಸೂಚನೆಯನ್ನು ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸುವ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿಯನ್ನು ಕೇಳಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸುಮಾರು 6 ಪುಟಗಳ ಮಾರ್ಗಸೂಚಿಯನ್ನು ಹೈಕೋರ್ಟ್ ಗೆ ಸಲ್ಲಿಕೆ ಮಾಡಿತ್ತು. ರಾಜ್ಯ ಸರಕಾರ ಸಲ್ಲಿಸಿರುವ ಮಾರ್ಗಸೂಚಿಯನ್ನು ಪರಿಶೀಲನೆ ನಡೆಸಿರುವ ಹೈಕೋರ್ಟ್ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆಯನ್ನು ನಡೆಸಬಹುದು ಎಂದು ಸೂಚಿಸಿದೆ.

ಹೈಕೋರ್ಟ್ ಸೂಚನೆಯಿಂದಾಗಿ ಪರೀಕ್ಷೆಯ ಕುರಿತು ಎದ್ದಿದ್ದ ಎಲ್ಲಾ ಗೊಂದಲಗಳಿಗೂ ತೆರೆಬಿದ್ದಂತಾಗಿದೆ. ಹೀಗಾಗಿ ಜೂನ್ 25ಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ರಾಜ್ಯ ಸರಕಾರ ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Leave A Reply

Your email address will not be published.