ಬೆಂಗಳೂರು : ವಿದ್ಯಾರ್ಥಿಗಳ ಸಾಮರ್ಥ್ಯ ಗುರುತಿಸುವ ನಿಟ್ಟಿನಲ್ಲಿ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದ್ದರೂ ಕೂಡ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ. ಅದ್ರಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬಗ್ಗೆ ತರಬೇತಿಯನ್ನು ನೀಡಲು ಶಾಲೆಗೆ ವಿದ್ಯಾರ್ಥಿಗಳನ್ನು ಕರೆಯಿಸುವಂತೆ ಸೂಚಿಸಿರೋದು ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಎಸ್ಎಸ್ಎಲ್ ಸಿ ಪರೀಕ್ಷೆಯ ಹಿನ್ನೆಲೆಯಲ್ಲಿಯೇ ಇದೀಗ 34 ಶೈಕ್ಷಣಿಕ ಜಿಲ್ಲೆಗಳಲ್ಲಿಯೂ ಸಿದ್ದತೆ ಮಾಡಿಕೊಳ್ಳುವಂತೆ ಸಚಿವ ಸುರೇಶ್ ಕುಮಾರ್ ಸೂಚನೆ ಕೊಟ್ಟಿದ್ದಾರೆ. ಕೊರೊನಾ ವೈರಸ್ ಸೋಂಕಿನ ಅಬ್ಬರದ ನಡುವಲ್ಲೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದೆ. ಎಸ್ಎಸ್ಎಲ್ ಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಎಂದು ಘೋಷಿಸಿದ ನಂತರದಲ್ಲಿಯೂ ಎರಡು ದಿನಗಳ ಕಾಲ ಪರೀಕ್ಷೆ ನಡೆಸೋದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಗರಂ ಆಗಿದ್ದರು. ಆದರೂ ಯಾವುದಕ್ಕೂ ಕ್ಯಾರೇ ಅನ್ನದ ಸಚಿವರು ಪರೀಕ್ಷಾ ಸಿದ್ದತೆಗೆ ಮುಂದಾಗಿದ್ದಾರೆ.
ಜೂನ್ 9ರಂದು ಸಚಿವ ಸುರೇಶ್ ಕುಮಾರ್ ಅವರು ಝೂಮ್ ಮೀಟ್ ಮೂಲಕ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ ಹಾಗೂ ಬಿಇಓಗಳ ಜೊತೆಗೆ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ಜೂನ್ ಅಂತ್ಯ ಅಥವಾ ಜುಲೈ ಮೊದಲ ವಾರದಲ್ಲಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದಾಗಿ ಸಚಿವರು ತಿಳಿಸಿದ್ದಾರೆ. ಅಲ್ಲದೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಎಲ್ಲಾ ಶಾಲೆಗಳಿಗೆ ವಾರಾಂತ್ಯದಲ್ಲಿ ತಲುಪಲಿದೆ. ಆಯಾಯ ಜಿಲ್ಲೆಗಳ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡಬೇಕು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಅವರನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಪರೀಕ್ಷೆಯಲ್ಲಿ ಮಕ್ಕಳಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ವಿದ್ಯಾರ್ಥಿಗಳಿಗೆ ಎನ್ 95 ಮಾಸ್ಕ್ ವಿತರಣೆ ಸೇರಿದಂತೆ ಹಲವು ಸೂಚನೆಗಳನ್ನು ನೀಡಿದ್ದಾರೆ. ಆಲ್ಲದೇ ಈ ಬಾರಿ ಪರೀಕ್ಷೆ ಹೊಸ ರೂಪದಲ್ಲಿ ನಡೆಯುವುದರಿಂದ ಜೂನ್ 15ರ ನಂತರ ವಿದ್ಯಾರ್ಥಿಗಳನ್ನು ಶಾಲೆಗೆ ಕರೆಯಿಸಿ ತರಗತಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿದ್ಯಾರ್ಥಿಗಳಿಗೆ ತರಬೇತಿ ನೀಡುವಂತೆ ಸೂಚನೆ ನೀಡಿದ್ದಾರೆ. ಸಚಿವರ ಈ ಮೌಖಿಕ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಆತಂಕಕ್ಕೆ ಸಿಲುಕಿದ್ದಾರೆ. ಕೊರೊನಾ ವೈರಸ್ ಸೋಂಕು ಹೆಚ್ಚಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ತರಗತಿಗೆ ಕರೆಯಿಸಿ ತರಬೇತಿ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.
ಕೊರೊನಾ ಲಾಕ್ ಡೌನ್ ಜಾರಿಯಲ್ಲಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರನ್ನು ಶಾಲೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿದ್ದಾರೆ. ಇನ್ನೊಂದೆಡೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆಯಿಸಿ ಅನ್ನೋ ಶಿಕ್ಷಣ ಸಚಿವರ ಸೂಚನೆ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.