ನವದೆಹಲಿ : ಕೊರೊನಾ ವೈರಸ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ಕೋರಿ ಸುಪ್ರೀಂ ಕೊರ್ಟ್ ಗೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ರಾಜ್ಯ ಸರಕಾರ ಜೂನ್ 25 ರಿಂದ ಜುಲೈ4ರ ವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸಲು ಸಿದ್ದತೆಯನ್ನು ಮಾಡಿಕೊಂಡಿದೆ. ಪರೀಕ್ಷೆ ನಡೆಸುವ ಕುರಿತು ಸಾಕಷ್ಟು ಪರವಿರೋಧದ ಮಾತುಗಳು ಕೇಳಿಬಂದಿವೆ. ಈ ನಡುವಲ್ಲೇ ಪರೀಕ್ಷೆ ನಡೆಸದಂತೆ ಕೋರಿ ಹೈಕೋರ್ಟ್ ಗೆ ಮೂವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಮಾರ್ಗಸೂಚಿಯ ಅನ್ವಯ ಪರೀಕ್ಷೆ ನಡೆಸಲು ಸರಕಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರಾಜಶ್ರೀ ನಾಗರಾಜ್ ಎಂಬವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 17ಕ್ಕೆ ವಿಚಾರಣೆಯನ್ನು ಕಾಯ್ದಿರಿಸಿದೆ. ಸುಪ್ರೀಂ ಕೋರ್ಟ್ ನ ವರ್ಚುವಲ್ ಕೋರ್ಟ್ ಸಂ.5ರಲ್ಲಿ ವಿಚಾರಣೆ ನಡೆಯಲಿದ್ದು, ನ್ಯಾ.ಎಲ್.ನಾಗೇಶ್ವರ ರಾವ್, ನ್ಯಾ.ಕೃಷ್ಣ ಮುರಾರಿ, ನ್ಯಾ. ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಕೊರೊನಾ ಹಿನ್ನೆಲೆಯಲ್ಲಿ ಸಾಕಷ್ಟು ರಾಜ್ಯಗಳು ಎಸ್ಎಸ್ಎಲ್ ಸಿ ಪರೀಕ್ಷೆಯನ್ನೇ ರದ್ದು ಮಾಡಿವೆ. ಆದರೆ ಕರ್ನಾಟಕ ಸರಕಾರ ಪರೀಕ್ಷೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. ಈ ನಡುವಲ್ಲೇ ಸುಪ್ರೀಂ ಕೋರ್ಟ್ ನಲ್ಲಿಂದು ಎಸ್ಎಸ್ಎಲ್ ಸಿ ಪರೀಕ್ಷೆಯ ಭವಿಷ್ಯದ ಕುರಿತು ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ತೀರ್ಪು ತೀವ್ರ ಕುತೂಹಲವನ್ನು ಮೂಡಿಸಿದೆ.