ಉಡುಪಿ : ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ವಿದ್ಯಾರ್ಥಿನಿಯ ತಂದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಗಂಟಲು ದ್ರವದ ಪರೀಕ್ಷೆಯನ್ನು ನಡೆಸಲಾಗಿತ್ತು. ಆದ್ರಿಂದು ಬಂದ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಕೋವಿಡ್ ಆಸ್ಪತ್ರೆಗೆ ಶೀಫ್ಟ್ ಮಾಡಲಾಗಿದೆ.

ವಿದ್ಯಾರ್ಥಿನಿ ಜೂನ್ 25ರಂದು ನಡೆದ ದ್ವಿತೀಯ ಭಾಷೆ ಹಾಗೂ ಜೂನ್ 27ರಂದು ನಡೆದ ಗಣಿತ ಪರೀಕ್ಷೆಯನ್ನು ಬರೆದಿದ್ದಳು. ಆದ್ರೀಗ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ವಿಜ್ಞಾನ ಪರೀಕ್ಷೆ ಬರೆಯಲು ಅವಕಾಶವನ್ನು ನಿರಾಕರಿಸಲಾಗಿದೆ. ಶಾಲೆಯನ್ನು ಸ್ಯಾನಿಟೈಸ್ ಮಾಡಲಾಗಿದ್ದು, ವಿದ್ಯಾರ್ಥಿನಿಯ ಜೊತೆಗೆ ಪ್ರಾಥಮಿಕ ಸಂರ್ಪಕವನ್ನು ಹೊಂದಿರುವವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿನಿಗೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ವಿದ್ಯಾರ್ಥಿನಿಗೆ ಸೋಂಕು ದೃಢಪಟ್ಟಿರುವು ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಇದೀಗ ಆತಂಕ ಶುರುವಾಗಿದೆ. ವಿದ್ಯಾರ್ಥಿನಿಯ ಜೊತೆಗೆ ಸಂಪರ್ಕದಲ್ಲಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನೂ ಕೂಡ ಕೊರೊನಾ ತಪಾಸಣೆಗೆ ಒಳಪಡಿಸುವ ಸಾಧ್ಯತೆಯಿದೆ.