ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ವಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ನಡೆಸುವುದು ಬೇಡ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿಡಿಯೋ ರಿಲೀಸ್ ಮಾಡಿರುವ ವಾಟಾಳ್ ನಾಗರಾಜ್, ಕೊರೊನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆ, ಕಾಲೇಜು ತೆರೆಯುವುದು ಬೇಡ. ಜೊತೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡುವಂತೆ ಅವರು ಆಗ್ರಹ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗು ತ್ತಲೇ ಬಹುತೇಕ ಜಿಲ್ಲೆಗಳಲ್ಲಿ ಅನ್ ಲಾಕ್ ಆದೇಶ ಜಾರಿಯಲ್ಲಿದೆ. ಈ ನಡುವಲ್ಲೇ ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ರಾಜ್ಯದ ಶಿಕ್ಷಣ ಇಲಾಖೆ ಮುಂದಾಗಿದೆ. ಆದರೆ ತಜ್ಞರು ನಾಲ್ಕು ವಾರಗಳಲ್ಲಿ ಕೊರೊನಾ ಮೂರನೇ ಅಲೆ ಆರ್ಭಟಿಸುವ ಎಚ್ಚರಿಕೆ ನೀಡಿದ್ದಾರೆ. ಈ ನಡುವಲ್ಲೇ ವಾಟಾಳ್ ನಾಗರಾಜ್ ಪರೀಕ್ಷೆ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ. ಸರಕಾರ ಅದ್ಯಾವ ಕ್ರಮ ಕೈಗೊಳ್ಳುತ್ತೆ ಅನ್ನೋದನ್ನು ಕಾದು ನೋಡಬೇಕಾಗಿದೆ.