ಆ.23ರಿಂದ ಶಾಲಾರಂಭ ; ತರಗತಿ ಹಾಜರಿಗೆ ಪೋಷಕರ ಅನುಮತಿ ಕಡ್ಡಾಯ : ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನಆತಂಕದ ನಡುವಲ್ಲೇ ಶಾಲೆಗಳು ಅಗಸ್ಟ್‌ 23ರಿಂದ ಆರಂಭವಾಗಲಿದೆ. ರಾಜ್ಯ ಸರಕಾರ ಹಾಗೂ ಶಿಕ್ಷಣ ಇಲಾಖೆ ಈಗಾಗಲೇ ಸಿದ್ದತೆಗಳನ್ನು ಪೂರ್ಣಗೊಳಿಸಿದೆ. ಆದರೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಪೋಷಕರ ಅನುಮತಿ ಕಡ್ಡಾಯ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಗಳನ್ನು ಆರಂಭಿಸುವ ಕುರಿತು ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಶಾಲಾರಂಭದ ದಿನ ಶಾಲೆಗಳಿಗೆ ನಾನು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಭೇಟಿಯನ್ನು ನೀಡುತ್ತೇವೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತಂಕ್ಕೆ ಒಳಗಾಗುವುದು ಬೇಡ. ಎಲ್ಲಾ ಶಿಕ್ಷಕರಿಗೆ ಈಗಾಗಲೇ ಕೊರೊನಾ ಲಸಿಕೆಯನ್ನು ನೀಡಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ 9 ರಿಂದ 12 ನೇ ತರಗತಿಗಳಿಗೆ ಶಾಲೆ ಆರಂಭ ಮಾಡಲು ಸಿದ್ಧತೆ ನಡೆದಿದೆ. ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾರಂಭವಾಗಲಿದ್ದು, ಕೊರೊನಾ ವೈರಸ್‌ ಸೋಂಕಿನ ಪಾಸಿಟಿವಿ ದರ ಶೇ.2ಕ್ಕಿಂತಲೂ ಹೆಚ್ಚಾಗಿರುವ ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಉಡುಪಿ, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಶಾಲೆಗಳು ಆರಂಭವಾಗುವುದಿಲ್ಲ. ಪೋಷಕರು ಆರೋಗ್ಯದ ದೃಷ್ಟಿಯಿಂದ ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದಿದ್ದಾರೆ.

ಶಾಲೆಗಳಲ್ಲಿ ತರಗತಿಗಳನ್ನು ನಡೆಸುವುದು, ಮಕ್ಕಳ ಸುರಕ್ಷತೆ ಸೇರಿದಂತೆ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಕಟ್ಟನಿಟ್ಟಾಗಿ ಪಾಲನೆ ಮಾಡುವಂತೆಯೂ ಸೂಚನೆಯನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಹೇಳಿದ್ದಾರೆ.

Comments are closed.