ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಆದ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಜನಪ್ರಿಯ ಯೂಟ್ಯೂಬರ್ ವರ್ಷಾ ಕಾವೇರಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಪೋಸ್ಟ್‌ಗಳನ್ನು ಮಾಡುತ್ತಿರುವ ಕೆಲವು ನಿರ್ದಿಷ್ಟ ಸೋಷಿಯಲ್ ಮೀಡಿಯಾ ಅಕೌಂಟ್‌ಗಳ ವಿರುದ್ಧ ಅವರು ದೂರು ನೀಡಿರುವುದ್ದಾಗಿ ಹೇಳಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿನಗರ (ಆರ್.ಆರ್. ನಗರ) ಪೊಲೀಸ್ ಠಾಣೆಗೆ ಭೇಟಿ ನೀಡಿದ ವರ್ಷಾ ಕಾವೇರಿ, ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುವ ನಿಟ್ಟಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಗೂ ಕಮೆಂಟ್‌ಗಳನ್ನು ಹಾಕಲಾಗುತ್ತಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯೂಟ್ಯೂಬರ್‌ಗಳು ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್‌ಗಳ ಮೇಲೆ ಸೈಬರ್ ಬೆದರಿಕೆ ಮತ್ತು ಟ್ರೋಲಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ವರ್ಷಾ ಕಾವೇರಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ದೂರು ಸ್ವೀಕರಿಸಿರುವ ರಾಜರಾಜೇಶ್ವರಿನಗರ ಪೊಲೀಸರು, ದೂರಿನಲ್ಲಿ ಉಲ್ಲೇಖಿಸಲಾದ ಸೋಷಿಯಲ್ ಮೀಡಿಯಾ ಖಾತೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.