ಪುಣೆಯಲ್ಲಿ ಭಾರೀ ಮಳೆಗೆ ಮೂರು ಅಂತಸ್ತಿನ ಕಟ್ಟಡ ಕುಸಿತ! 14 ಮಂದಿಯ ರಕ್ಷಣೆ
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಪುಣೆ ಸಮೀಪದ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಅವಶೇಷಗಳಡಿ ಸಿಲುಕಿದ್ದ 14 ಮಂದಿಯನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಮಹಾರಾಷ್ಟ್ರದಲ್ಲಿ ಮುಂದುವರಿದಿರುವ ಭಾರೀ ಮಳೆಯ ಪರಿಣಾಮ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ ಪುಣೆ ಸಮೀಪದ ಪಿಂಪ್ರಿ-ಚಿಂಚ್ವಾಡ್ ಮಹಾನಗರ ಪಾಲಿಕೆ ವ್ಯಾಪ್ತಿಯ ಮೋಶಿ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಕಟ್ಟಡ ಕುಸಿತ ಆತಂಕ ಸೃಷ್ಟಿಸಿದೆ.
ಮೋಶಿಯಲ್ಲಿರುವ ತ್ಯಾಜ್ಯ ಮರುಬಳಕೆ ಘಟಕದ ಮೂರು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಅಲ್ಲಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡರು. ಪ್ರಾಥಮಿಕ ಮಾಹಿತಿಯಂತೆ, ಕಟ್ಟಡ ಕುಸಿತಕ್ಕೆ ನಿರಂತರ ಸುರಿದ ಭಾರೀ ಮಳೆಯೇ ಕಾರಣ ಎನ್ನಲಾಗಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅವಶೇಷಗಳನ್ನು ತೆರವುಗೊಳಿಸಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದರು.
ಅಧಿಕಾರಿಗಳ ಮಾಹಿತಿ ಪ್ರಕಾರ, ಘಟನೆ ನಡೆದಾಗ ಕಟ್ಟಡದೊಳಗೆ 16 ಮಂದಿ ಕೆಲಸ ಮಾಡುತ್ತಿದ್ದರು. ಕಟ್ಟಡ ಕುಸಿದ ತಕ್ಷಣ ಇಬ್ಬರು ಸ್ವತಃ ಹೊರಬಂದರೆ, ಉಳಿದ 14 ಮಂದಿಯನ್ನು ರಕ್ಷಣಾ ತಂಡಗಳು ಯಶಸ್ವಿಯಾಗಿ ರಕ್ಷಿಸಿವೆ. ಇದುವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಗಾಯಗೊಂಡವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದೇ ವೇಳೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಪುಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ನಿಂತಿರುವ ಪ್ರದೇಶಗಳಿಂದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಇನ್ನೊಂದೆಡೆ, ಮುಂಬೈನ ಮಂಕುರ್ಡ್ ಪ್ರದೇಶದಲ್ಲೂ ಮಳೆಯಿಂದ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರಲ್ಲಿ ಐವರು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

