ಅಯೋಧ್ಯೆ ರಾಮ ಮಂದಿರದ ದೇಣಿಗೆ ದುರುಪಯೋಗ! 8 ಆರೋಪಿಗಳ ವಿರುದ್ಧ ಎಫ್‌ಐಆರ್
ಅಯೋಧ್ಯೆ ರಾಮ ಮಂದಿರದ ದೇಣಿಗೆ ಮತ್ತು ಕಾಣಿಕೆ ದುರುಪಯೋಗ ಆರೋಪದ ಹಿನ್ನೆಲೆ ಟ್ರಸ್ಟ್ ಸದಸ್ಯರ ದೂರಿನ ಮೇರೆಗೆ ಎಂಟು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರಕ್ಕೆ ಸಲ್ಲಿಕೆಯಾದ ದೇಣಿಗೆ ಹಾಗೂ ಕಾಣಿಕೆಗಳ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯಾಗಿ ಎಂಟು ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಬೆಳವಣಿಗೆ ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ನೀಡಿದ ದೂರಿನ ಆಧಾರದ ಮೇಲೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಶೇಷ ತನಿಖಾ ತಂಡದ ಪ್ರಾಥಮಿಕ ವರದಿ ಸಲ್ಲಿಕೆಯಾದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದಲ್ಲಿ ಟಿನ್ನು ಯಾದವ್ ಸೇರಿದಂತೆ ಎಂಟು ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದು, ಟಿನ್ನು ಯಾದವ್ ಪ್ರಮುಖ ಆರೋಪಿಯಾಗಿ ಉಲ್ಲೇಖಗೊಂಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ವಂಚನೆ, ಕ್ರಿಮಿನಲ್ ಪಿತೂರಿ ಹಾಗೂ ಇತರ ಆರೋಪಗಳನ್ನು ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಮುಖ ಟ್ರಸ್ಟ್ ಪದಾಧಿಕಾರಿಗಳ ಹೆಸರನ್ನು ಎಫ್ ಐಆರ್‌ನಲ್ಲಿ ಉಲ್ಲೇಖಿಸಲಾಗಿಲ್ಲ. ಬಂಧಿತರಲ್ಲಿ ಆರು ಮಂದಿ ಕ್ಯಾಷಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರೆಂದು ವರದಿಗಳು ತಿಳಿಸಿವೆ.
ರಾಮ ಮಂದಿರದ ದೇಣಿಗೆ ಹಣದ ದುರುಪಯೋಗದ ಆರೋಪವನ್ನು ವಿರೋಧ ಪಕ್ಷಗಳು ಪ್ರಮುಖ ರಾಜಕೀಯ ವಿಷಯವನ್ನಾಗಿ ಮಾಡಿಕೊಂಡಿದ್ದು, ಆಡಳಿತ ಪಕ್ಷದ ವಿರುದ್ಧ ಟೀಕೆಗಳನ್ನು ಮುಂದುವರಿಸಿವೆ. ಈ ನಡುವೆ ಪ್ರಕರಣದ ತನಿಖೆಯನ್ನು ಅಧಿಕಾರಿಗಳು ಮತ್ತಷ್ಟು ವಿಸ್ತರಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.

