ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ; ಮೂವರು ಸಾವು! 25 ಮಂದಿಗೆ ಗಂಭೀರ ಗಾಯ
ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದ ಮೂವರು ಮೃತಪಟ್ಟಿದ್ದು, 25 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ತೋಂಕಾಲನ್ ಗ್ರಾಮದಲ್ಲಿ ನಡೆದ ಪಟಾಕಿ ಕಾರ್ಖಾನೆ ಸ್ಫೋಟ ಭಾರೀ ಆತಂಕಕ್ಕೆ ಕಾರಣವಾಗಿದೆ. ಗುರುವಾರ ಬೆಳಗ್ಗೆ ಸಂಭವಿಸಿದ ಈ ಅವಘಡದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.
ಕಾರ್ಖಾನಿಯಲ್ಲಿ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಗದ್ದಲ ಉಂಟಾಯಿತು. ಜನರು ಭಯದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅವಘಡದಲ್ಲಿ ಗಾಯಗೊಂಡ 25 ಮಂದಿಯಲ್ಲಿ 13 ಮಂದಿಗೆ ದೇವಾಸ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಗೊಂಡ 12 ಮಂದಿಯನ್ನು ಇಂಡೋರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ನೆರವು ಕಾರ್ಯಾಚರಣೆ ಆರಂಭಿಸಿವೆ. ಮರಣಹೊಂದಿದವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸ್ಫೋಟದ ಪರಿಣಾಮ ಕಾರ್ಖಾನಿಯ ಕೆಲವು ಭಾಗಗಳು ಧ್ವಂಸಗೊಂಡಿದ್ದು, ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮವಾಗಿ ಪಟಾಕಿ ತಯಾರಿಕೆ ನಡೆಯುತ್ತಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ.



