ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂವರು ಬಲಿ! ಹಲವು ಮನೆಗಳಿಗೆ ಬೆಂಕಿ ಹಚ್ಚಿ ಆತಂಕ ಸೃಷ್ಟಿ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಶಸ್ತ್ರ ದಾಳಿಕೋರರು ಗ್ರಾಮದ ಮೇಲೆ ದಾಳಿ ನಡೆಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಹಲವು ಮನೆಗಳಿಗೆ ಬೆಂಕಿ ಹಚ್ಚಿರುವುದಾಗಿ ವರದಿಯಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸೆಯ ಕಿಡಿ ಹೊತ್ತಿದೆ. ಕಾಂಗ್‌ಪೋಕ್ಪಿ ಜಿಲ್ಲೆಯ ನ್ಯೂ ಕೀಥೆಲ್‌ಮಾನ್ಬಿ ಪ್ರದೇಶದ ಲೋಯಿಬೋಲ್ ಗ್ರಾಮದಲ್ಲಿ ನಡೆದ ಸಶಸ್ತ್ರ ದಾಳಿಯಿಂದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಶುಕ್ರವಾರ ಮುಂಜಾನೆ ಸುಮಾರು 4.10ರ ವೇಳೆಗೆ ಶಸ್ತ್ರಾಸ್ತ್ರಧಾರಿಗಳ ಗುಂಪೊಂದು ಗ್ರಾಮಕ್ಕೆ ನುಗ್ಗಿ ಏಕಾಏಕಿ ಗುಂಡಿನ ದಾಳಿ ನಡೆಸಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ದಾಳಿಕೋರರ ಅಟ್ಟಹಾಸದಿಂದ ಗ್ರಾಮಸ್ಥರು ಜೀವಭಯದಿಂದ ಸುರಕ್ಷಿತ ಸ್ಥಳಗಳತ್ತ ಓಡಿಹೋಗಿದ್ದಾರೆ.

ಈ ದಾಳಿಯ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೆ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಕೆಲವು ಮನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಕುಟುಂಬಗಳು ತಮ್ಮ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿರುವುದು ನೋವಿನ ಸಂಗತಿಯಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿವೆ. ದಾಳಿ ನಡೆಸಿದವರನ್ನು ಪತ್ತೆಹಚ್ಚಲು ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ.

ಇದೀಗ ಹಿಂಸಾಚಾರ ಪೀಡಿತ ಪ್ರದೇಶ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇಟ್ಟಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಶಾಂತಿಯತ್ತ ಸಾಗುತ್ತಿದ್ದ ಮಣಿಪುರದಲ್ಲಿ ಮತ್ತೆ ಇಂತಹ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಪರಿಸ್ಥಿತಿ ಶೀಘ್ರ ಸಾಮಾನ್ಯವಾಗಲಿ ಎಂಬ ಆಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸುತ್ತಿದ್ದಾರೆ.

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »

Related Stories