ಪ್ರತೀ ಟನ್ ಕಬ್ಬಿಗೆ 3200 ರೂಪಾಯಿ : ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕಬ್ಬು ಬೆಳೆಗಾರರು ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಸರಕಾರ ಮಣಿದಿದೆ. ರಾಜ್ಯ ಸರಕಾರ ಪ್ರತೀ ಟನ್ ಕಬ್ಬಿಗೆ 3200 ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 12 ಸಕ್ಕರೆ ಕಾರ್ಖಾನೆಗಳು ಸರಕಾರ ಸುಪರ್ದಿಯಲ್ಲಿದೆ. ಉಳಿದ ಎಲ್ಲಾ ಕಾರ್ಖಾನೆಗಳು ಖಾಸಗಿ ಮಾಲೀಕತ್ವವನ್ನು ಹೊಂದಿವೆ. ರೈತರು ಪ್ರತೀ ಟನ್ ಕಬ್ಬಿಗೆ 3500 ರೂಪಾಯಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಕೇಂದ್ರ ಸರಕಾರಕ್ಕೆ ರೈತರ ಬೇಡಿಕೆಯ ಕುರಿತು ಪತ್ರ ಬರೆದಿದ್ದೇನೆ. ಬೆಳಗಿನಿಂದ ಸಂಜೆಯವರೆಗೂ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಚರ್ಚಿಸಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಬ್ಬಿನ ಕಾರ್ಖಾನೆಯ ಮಾಲೀಕರ ಜೊತೆ ಸಿಎಂ ಸಭೆ : ಹೆಡ್‌ಲೈನ್ಸ್
- ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆ ಎಂಎಸ್ಪಿ ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದೆ.
- ಅವರು ಸಮಯ ನೀಡಿದರೆ ನಾಳೆಯೇ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು.
- ಸಕ್ಕರೆಗೆ ಎಮ್ಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ.
- ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸಿದೆ.
- ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್ಪಿ ಹೆಚ್ಚಳ ಮಾಡಿಲ್ಲ.
- ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ಪಿ ವೈಜ್ಞಾನಿಕ ವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು.
- ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.
- ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲು ಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಿದ್ದೇವೆ.
- ಕಬ್ಬಿನ 11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.

ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.
ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.
CM Siddaramaiah Announces Rs 3,200 Per Ton for Sugarcane in Karnataka



