CM Siddaramaiah | Fake note by Karnataka CM: ಬೆಂಗಳೂರು: ಮುಖ್ಯಮಂತ್ರಿಗಳ ಸಚಿವಾಲಯದ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ವರ್ಗಾವಣೆ ಟಿಪ್ಪಣಿಯೊಂದನ್ನು ಸೃಷ್ಟಿಸಿರುವ ಕಿಡಿಗೇಡಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸ್ ದೂರು ದಾಖಲಾಗಿದ್ದು, ಕಟ್ಟುನಿಟ್ಟಿನ ತನಿಖೆಗೆ ಆದೇಶಿಸಲಾಗಿದೆ.
ಏನಿದು ಪ್ರಕರಣ?
ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ (DHO) ಡಾ. ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿಯುಳ್ಳ ನಕಲಿ ಟಿಪ್ಪಣಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡುವ ಅಸಂಬದ್ಧ ಪತ್ರವನ್ನು ನೋಡಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಅಚ್ಚರಿ ವ್ಯಕ್ತಪಡಿಸಿದ್ದರು .ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಈ ಕೃತ್ಯವನ್ನು ಕಟುವಾಗಿ ಖಂಡಿಸಿದ್ದಾರೆ:
- ನಕಲಿ ದಾಖಲೆ: “ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯನ್ನು ಸೃಷ್ಟಿಸಿ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ” ಎಂದು ಸಿಎಂ ಹೇಳಿದ್ದಾರೆ.
- ತನಿಖೆಗೆ ಆದೇಶ: ಈ ಬಗ್ಗೆ ಸಚಿವಾಲಯದ ಅಧಿಕಾರಿಗಳು ಈಗಾಗಲೇ ಪೊಲೀಸ್ ದೂರು ದಾಖಲಿಸಿದ್ದಾರೆ. ಇದರ ಹಿಂದಿರುವ ದುಷ್ಟರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
- ನಕಲಿ ಸುದ್ದಿಗಳ ಬಗ್ಗೆ ಎಚ್ಚರಿಕೆ: “ಈಗಿನ ಎಐ (AI) ಮತ್ತು ಫೋಟೋಶಾಪ್ ಯುಗದಲ್ಲಿ ವಾಟ್ಸಾಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಹಂಚಿಕೊಳ್ಳುವುದು ಕೂಡ ಅಪರಾಧವೇ ಆಗಿದೆ” ಎಂದು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ : ಶಾಸಕ ವಿ.ಸುನೀಲ್ ಕುಮಾರ್ ಗರಂ
ಅಧಿಕೃತ ಸ್ಪಷ್ಟನೆ:
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಅರುಣ್ ಫುರ್ಟಾಡೊ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ವೈರಲ್ ಆಗಿರುವ ಟಿಪ್ಪಣಿಯು ಇ-ಕಚೇರಿ (E-Office) ತಂತ್ರಾಂಶದಲ್ಲಿ ದಾಖಲಾಗಿಲ್ಲ ಮತ್ತು ಅಂತಹ ಯಾವುದೇ ವರ್ಗಾವಣೆ ಆದೇಶ ಹೊರಡಿಸಿಲ್ಲ ಎಂದು ತಿಳಿಸಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದಲೇ ಈ ನಕಲಿ ಪತ್ರ ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


