Karnataka Rain Alert: ಕರ್ನಾಟಕದಲ್ಲಿ ಜುಲೈ 31ರವರೆಗೆ ಭಾರೀ ಮಳೆ; 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 28 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ರೂಪದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ ಇರಲಿದೆ. ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು : ಕರ್ನಾಟಕದಲ್ಲಿ ಕೊಂಚ ಬಿಡುವು ನೀಡಿದ್ದ ವರುಣದೇವ ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ. ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ತೀವ್ರ ವಾತಾವರಣ ಬದಲಾವಣೆಯಿಂದಾಗಿ ರಾಜ್ಯಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಜುಲೈ 31ರವರೆಗೆ ಇಡೀ ರಾಜ್ಯಕ್ಕೆ ಹೈ ಅಲರ್ಟ್ ಘೋಷಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 28 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ರೂಪದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ ಇರಲಿದೆ. ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್ ಮತ್ತು ಯಾದಗಿರಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಮುಂದಿನ ಹತ್ತು ದಿನಗಳ ಕಾಲ ಈ ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಮತ್ತು ಮೋಡದ ಮಿಶ್ರ ವಾತಾವರಣ ಇದ್ದರೂ, ಆಗಸ್ಟ್ 3ರಿಂದ ಅಲ್ಲಿಯೂ ಮಳೆ ಚುರುಕಾಗುವ ಲಕ್ಷಣಗಳಿವೆ.
ಪ್ರಸ್ತುತ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಆಂಧ್ರ, ತೆಲಂಗಾಣ ಮತ್ತು ಮಧ್ಯಪ್ರದೇಶದ ಮೂಲಕ ಸಾಗಿ ಆಗಸ್ಟ್ 1ರ ವೇಳೆಗೆ ಗುಜರಾತ್ ತಲುಪಿ ದುರ್ಬಲಗೊಳ್ಳಲಿದೆ. ಮತ್ತೊಂದೆಡೆ ಹಿಂದೂ ಮಹಾಸಾಗರದಲ್ಲಿ ಹೊಸ ಹವಾಮಾನ ಬದಲಾವಣೆಗಳು ಕಂಡುಬರುತ್ತಿದೆ.
ಆಗಸ್ಟ್ 2ರಿಂದ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಗಣನೀಯವಾಗಿ ಇಳಿಮುಖವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಿಯವರೆಗೆ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

