ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕರ್ನಾಟಕದ ನದಿಗಳಲ್ಲಿ ನೀರಿನ ಹರಿವು ಏರಿಕೆಯಾಗಿದ್ದು, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಚಿಕ್ಕೋಡಿ ಭಾಗಗಳಲ್ಲಿ ಪ್ರವಾಹದ ಆತಂಕ ಹೆಚ್ಚಿದೆ. ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಹಲವು ಕೆಳಮಟ್ಟದ ಸೇತುವೆಗಳು ಜಲಾವೃತಗೊಂಡಿವೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಕೃಷ್ಣಾ ನದಿಗೆ ಸುಮಾರು 1.21 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಪರಿಣಾಮವಾಗಿ ನಿಪ್ಪಾಣಿ ತಾಲೂಕಿನ ಆರು ಹಾಗೂ ಚಿಕ್ಕೋಡಿ ತಾಲೂಕಿನ ಎರಡು ಕೆಳಮಟ್ಟದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇತ್ತ ಮಹಾರಾಷ್ಟ್ರದ ಸಾವಂತವಾಡಿ ಮತ್ತು ಅಂಬೋಲಿ ಅರಣ್ಯ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಳೆದ ಒಂದೇ ದಿನದಲ್ಲಿ ಜಲಾಶಯದ ನೀರಿನ ಮಟ್ಟ ಸುಮಾರು ಏಳು ಅಡಿ ಏರಿಕೆಯಾಗಿದೆ. ಪ್ರಸ್ತುತ ಜಲಾಶಯಕ್ಕೆ ಸುಮಾರು 26 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೀರಿನ ಸಂಗ್ರಹಣೆಯೂ ಹೆಚ್ಚಾಗಿದೆ.
ಖಾನಾಪುರ ತಾಲೂಕಿನಲ್ಲಿಯೂ ಮಳೆ ಮುಂದುವರಿದಿದ್ದು, ಇದರ ಪರಿಣಾಮ ಮಲಪ್ರಭಾ ಜಲಾಶಯದ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದ ಮಟ್ಟ ಸುಮಾರು ಮೂರು ಅಡಿ ಏರಿಕೆಯಾಗಿದ್ದು, ಪ್ರಸ್ತುತ ಸುಮಾರು 13,700 ಕ್ಯೂಸೆಕ್ಸ್ ನೀರು ಒಳಹರಿವು ದಾಖಲಾಗಿದೆ.
ನದಿಗಳು ಮತ್ತು ಜಲಾಶಯಗಳ ನೀರಿನ ಮಟ್ಟ ನಿರಂತರವಾಗಿ ಏರುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಿವಾಸಿಗಳು ಹಾಗೂ ಸೇತುವೆಗಳನ್ನು ಬಳಸುವ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಮಳೆಯ ಪ್ರಮಾಣ ಹೆಚ್ಚಾದರೆ ಪರಿಸ್ಥಿತಿ ಮತ್ತಷ್ಟು ಬದಲಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ.
