ಕೊಡಗು, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ! ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಉಷ್ಣ ವಾತಾವರಣ ಮುಂದುವರಿಯಲಿದ್ದು, ಕೆಲವು ಭಾಗಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಮುಂದಿನ ಒಂದು ದಿನ ಕರ್ನಾಟಕದಲ್ಲಿ ಮಿಶ್ರ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಉತ್ತರ ಭಾಗದಲ್ಲಿ ಉಷ್ಣ ವಾತಾವರಣ ಜನರನ್ನು ಕಾಡುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ದಿನದ ತಾಪಮಾನ 34°Cವರೆಗೆ ದಾಖಲಾಗಬಹುದು.

ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಮಡಿಕೇರಿ, ಕೊಡಗು ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಗಾಳಿ ಮತ್ತು ಗುಡುಗು ಮಿಂಚಿನ ಸಾಧ್ಯತೆ ಹೆಚ್ಚಾಗಿದೆ. ಕಾಫಿನಾಡು ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ತಂಪು ವಾತಾವರಣ ನಿರ್ಮಾಣವಾಗುವ ನಿರೀಕ್ಷೆ ಇದೆ.

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಆರ್ದ್ರತೆ ಪ್ರಮಾಣ ಹೆಚ್ಚಿದ್ದು, ದಿನವಿಡೀ ಸೆಖೆಯ ಅನುಭವ ಇರಲಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇನ್ನೂ ಕಲಬುರಗಿ, ರಾಯಚೂರು ಮತ್ತು ಬೆಳಗಾವಿಯಲ್ಲಿ ತಾಪಮಾನ 40°C ಸಮೀಪ ತಲುಪಬಹುದು. ಹುಬ್ಬಳ್ಳಿ-ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಸಂಜೆ ವೇಳೆ ಚದುರಿದ ಮಳೆಯ ಸಾಧ್ಯತೆ ಇದ್ದರೂ, ದಿನದ ಹೊತ್ತಿನಲ್ಲಿ ಬಿಸಿಲು ತೀವ್ರವಾಗಿರಲಿದೆ.

ಹವಾಮಾನ ಬದಲಾವಣೆಯಿಂದ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮಳೆಯ ಸಾಧ್ಯತೆ ಇರುವ ಜಿಲ್ಲೆಗಳಲ್ಲಿ ಹೊರಗೆ ತೆರಳುವವರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »

Related Stories